ಬೆಳಗಾವಿ ಜಿಲ್ಲೆಯ ಹುಕ್ಕೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರುದ್ಧ ಸಾರ್ವಜನಿಕರ ದೂರಿನ ಮೇರೆಗೆ ಕ್ರಮ ಕೈಗೊಂಡು ಇಲ್ಲಿಂದ ವರ್ಗಾವಣೆ ಮಾಡುವಂತೆ ಆಗ್ರಹಿಸಿ ಶಾಸಕ ನಿಖಿಲ ಕತ್ತಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದಾರೆ.
ಹುಕ್ಕೇರಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹೊಳೆಪ್ಪ ಎಚ್ ಅವರ ಮೇಲೆ ವಿವಿಧ ಗುರುತರ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಅವರನ್ನು ಹುಕ್ಕೇರಿಯಿಂದ ಬೇರೆಡೆಗೆ ವರ್ಗಾವಣೆ ಮಾಡುವಂತೆ ಶಾಸಕ ನಿಖಿಲ್ ಕತ್ತಿ ಅವರು ಕಳೆದ ಡಿ. 16 ರಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮತ್ತು ಇಲಾಖೆ ಉಪನಿರ್ದೇಶಕರಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ ಎಂಬುದು ತಡವಾಗಿ ತಿಳಿದು ಬಂದಿದೆ.
ತಾಲೂಕಿನ ವಿವಿಧ ಕಡೆಗಳಲ್ಲಿ ಹೊಸದಾಗಿ ನೇಮಕಗೊಂಡ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆದೇಶ ಪತ್ರವನ್ನು ಹಂಚಿಕೆ ಮಾಡಲು ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ,ಕೆಲ ಯೋಜನೆಗಳಲ್ಲಿ ಅವ್ಯವಹಾರ ಮಾಡಿರುವುದು ನಮ್ಮ ಗಮನಕ್ಕೆ ಬಂದಿರುವುದರಿಂದ ತಕ್ಷಣವೇ ಸಿಡಿಪಿಒ ಹೊಳೆಪ್ಪ ಮೇಲೆ ಶಿಸ್ತು ಕ್ರಮ ಕೈಗೊಂಡು ಹುಕ್ಕೇರಿಯಿಂದ ಬೇರೆಡೆಗೆ ವರ್ಗಾವಣೆ ಮಾಡುವಂತೆ ಶಾಸಕರು ಒತ್ತಾಯಿಸಿದ್ದಾರೆ.