ಧಾರಾಕಾರ ಮಳೆಯಿಂದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಗಾಂಧಿ ಆಸ್ಪತ್ರೆ ಸಮೀಪದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ತಡೆಗೋಡೆ ಕುಸಿದು ಬಿದ್ದ ಘಟನೆ ಶುಕ್ರವಾರ ನಡೆದಿದೆ.
ಸುಮಾರು 25 ಅಡಿ ಎತ್ತರದ ತಡೆಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಅಪಾರ ಪ್ರಮಾಣದ ಮಣ್ಣು ರಸ್ತೆಗೆ ಹರಿದಿದೆ. ಅದೃಷ್ಟವಶಾತ್ ಯಾವುದೇ ವಾಹನಗಳು ಗೋಡೆ ಕುಸಿದ ಸ್ಥಳದಲ್ಲಿ ಇರದ ಕಾರಣ ಪ್ರಾಣಾಪಾಯ ಅಥವಾ ಅಪಘಾತ ಸಂಭವಿಸಿಲ್ಲ.
ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ತಡೆಗೋಡೆ ನೆನೆದು ದುರ್ಬಲಗೊಂಡು ಕುಸಿದಿದೆ ಎಂದು ಹೇಳಲಾಗುತ್ತಿದೆ. ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸರ್ವಿಸ್ ರಸ್ತೆಯ ಮೂಲಕ ತಾತ್ಕಾಲಿಕ ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಿದ್ದು, ಸ್ಥಳದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಇತ್ತೀಚೆಗಷ್ಟೇ ನಿರ್ಮಿಸಲಾಗಿದ್ದ ತಡೆಗೋಡೆ ಕುಸಿದಿರುವುದು ಕಾಮಗಾರಿಯ ಗುಣಮಟ್ಟದ ಬಗ್ಗೆ ಅನುಮಾನ ಮೂಡಿಸಿದೆ. ರಾಷ್ಟ್ರೀಯ ಹೆದ್ದಾರಿಯ ಕಳಪೆ ಕಾಮಗಾರಿಯೇ ಈ ಘಟನೆಗೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದು, ಕಾಮಗಾರಿಯ ಗುಣಮಟ್ಟದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಶಾಶ್ವತ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.



