ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ ‘ಸಶಕ್ತ ಕರ್ನಾಟಕ’ ಕಾರ್ಯಕ್ರಮದಡಿ ಬೆಳಗಾವಿಯಲ್ಲಿ ಅಕ್ಟೋಬರ್ 25ರಂದು ರಾಷ್ಟ್ರಮಟ್ಟದ ಮ್ಯಾರಥಾನ್ ಆಯೋಜಿಸಲಾಗಿದೆ. ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮನವಿ ಮಾಡಿದರು.
ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮ್ಯಾರಥಾನ್ ಆಯೋಜನೆ ಕುರಿತು ಮಾಹಿತಿ ನೀಡಿದ ಅವರು, ರಾಜ್ಯದ ಬೆಳಗಾವಿ, ಹಂಪಿ, ಮುರಡೇಶ್ವರ ಹಾಗೂ ಚಿತ್ರದುರ್ಗ ಸೇರಿದಂತೆ ನಾಲ್ಕು ಪ್ರಮುಖ ಸ್ಥಳಗಳಲ್ಲಿ ರಾಷ್ಟ್ರಮಟ್ಟದ ಮ್ಯಾರಥಾನ್ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ, ಜೆ.ಜೆ. ಆಕ್ಟಿವ್ ಬೆಂಗಳೂರು ಸಂಸ್ಥೆಯ ಸಹಯೋಗದಲ್ಲಿ ಮ್ಯಾರಥಾನ್ ನಡೆಯಲಿದೆ.
ಮ್ಯಾರಥಾನ್ನಲ್ಲಿ 5ಕಿ.ಮೀ., 10ಕಿ.ಮೀ. ಹಾಗೂ 21 ಕಿ.ಮೀ. ಹಾಫ್ ಮ್ಯಾರಥಾನ್ ಸ್ಪರ್ಧೆಗಳು ನಡೆಯಲಿವೆ.
ಸುವರ್ಣಸೌಧದಿಂದ ಆರಂಭವಾಗುವ ಓಟವು ನಗರದ ಕೋಟೆ ಕೆರೆ ಮಾರ್ಗವಾಗಿ ಸಂಚರಿಸಿ ಮತ್ತೆ ಸುವರ್ಣಸೌಧದ ಮುಂಭಾಗದಲ್ಲಿ ಮುಕ್ತಾಯಗೊಳ್ಳಲಿದೆ.
ಭಾಗವಹಿಸುವ ಎಲ್ಲ ಕ್ರೀಡಾಪಟುಗಳಿಗೆ ಟಿ-ಶರ್ಟ್, ಪದಕ ಹಾಗೂ ಲಘು ಉಪಾಹಾರದ ವ್ಯವಸ್ಥೆ ಮಾಡಲಾಗಿದೆ.
ವಿಜೇತರಿಗೆ ₹7,500 ಬಹುಮಾನ
21 ಕಿ.ಮೀ. ಹಾಫ್ ಮ್ಯಾರಥಾನ್ನ 18ರಿಂದ 45 ವರ್ಷದೊಳಗಿನ ವಿಭಾಗದಲ್ಲಿ ಪ್ರಥಮ ಬಹುಮಾನ ₹7,500, ದ್ವಿತೀಯ ಬಹುಮಾನ ₹5,000 ಹಾಗೂ ತೃತೀಯ ಬಹುಮಾನ ₹3,000 ನೀಡಲಾಗುವುದು. ವಿಜೇತರಿಗೆ ಟ್ರೋಫಿಗಳನ್ನೂ ವಿತರಿಸಲಾಗುವುದು. ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಬಹುಮಾನ ನೀಡುವ ವ್ಯವಸ್ಥೆ ಮಾಡಲಾಗಿದೆ.
ಕ್ರೀಡಾಪಟುಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಮ್ಯಾರಥಾನ್ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.



