ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಹತ್ತಿರ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾರಿಗೆ ಸಂಸ್ಥೆಯ ಬಸ್ ಹಾಗೂ ಮಿನಿ ಲಾರಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ತಿಗಡಿ ಕಡೆಯಿಂದ ಬೈಲಹೊಂಗಲದತ್ತ ಪ್ರಯಾಣಿಕರನ್ನು ಹೊತ್ತ ಸಾರಿಗೆ ಬಸ್ ಬರುತ್ತಿದ್ದ ವೇಳೆ, ಎದುರು ದಿಕ್ಕಿನಿಂದ ಇಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಮಿನಿ ಲಾರಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಬಸ್ನಲ್ಲಿದ್ದ ಹಲವು ಪ್ರಯಾಣಿಕರು ಹಾಗೂ ಲಾರಿ ಚಾಲಕ ಸೇರಿದಂತೆ ಕೆಲವರು ಗಾಯಗೊಂಡಿದ್ದಾರೆ.
ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಬಸ್ ಹಾಗೂ ಲಾರಿ ಎರಡೂ ರಸ್ತೆ ಮಧ್ಯೆ ನಿಂತಿದ್ದರಿಂದ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿ ವಾಹನ ಸವಾರರು ತೊಂದರೆ ಅನುಭವಿಸಿದರು.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಬೈಲಹೊಂಗಲ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.