ರಾಜ್ಯ ಪೊಲೀಸ್ ಇಲಾಖೆಯ ಖಾಲಿ ಇರುವ ಸಿವಿಲ್ ಕಾನ್‌ಸ್ಟೆಬಲ್ ಹುದ್ದೆಗಳ ನೇರ ನೇಮಕಾತಿ ಲಿಖಿತ ಪರೀಕ್ಷೆಯು ಆಗಸ್ಟ್ 2ರಂದು ಬೆಳಗಾವಿ ಜಿಲ್ಲೆಯಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಅಕ್ರಮರಹಿತ ಹಾಗೂ ಪಾರದರ್ಶಕವಾಗಿ ನಡೆಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಸಿದ್ಧತೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ನಿಯೋಜಿತ ಸಿಬ್ಬಂದಿ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಅಭ್ಯರ್ಥಿಗಳಿಗೆ ಅಗತ್ಯ ಮೂಲಸೌಲಭ್ಯ ಒದಗಿಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ ಮಾತನಾಡಿ, ಬೆಳಗಾವಿ ನಗರದಲ್ಲಿ 46 ಹಾಗೂ ಚಿಕ್ಕೋಡಿಯಲ್ಲಿ 15 ಸೇರಿ ಒಟ್ಟು 61 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಸುಮಾರು 25 ಸಾವಿರ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಪ್ರತಿಯೊಂದು ಕೇಂದ್ರದಲ್ಲೂ ಎಐ (AI) ಕ್ಯಾಮೆರಾ ಕಣ್ಣಾವಲಿನಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು.





