ಆಸ್ತಿ ಹಂಚಿಕೆ ವಿಚಾರದ ವಿವಾದ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಅವರಾದಿ ಗ್ರಾಮದ ನಿವಾಸಿ, ಮಾಜಿ ಸೈನಿಕ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ ಹತ್ಯೆಗೀಡಾದವರು. ದಾಳಿಯಲ್ಲಿ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕುಂದರಗಿ ಕುಟುಂಬದಲ್ಲಿ ಹಲವು ದಿನಗಳಿಂದ ಆಸ್ತಿ ಹಂಚಿಕೆ ವಿಚಾರವಾಗಿ ವಿವಾದ ನಡೆಯುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ಮಾತುಕತೆ ಹಾಗೂ ಕಾಗದಪತ್ರಗಳ ಪರಿಶೀಲನೆಗಾಗಿ ರುದ್ರಪ್ಪ ಹಾಗೂ ಶಶಿಕಲಾ ಗ್ರಾಮ ಪಂಚಾಯಿತಿ ಕಚೇರಿಗೆ ಬಂದಿದ್ದರು. ಈ ವೇಳೆ ಜಗಳ ಆರಂಭವಾಗಿ, ರುದ್ರಪ್ಪ ಅವರ ಇಬ್ಬರು ಸಹೋದರರು ಹಾಗೂ ಸಹೋದರನ ಪುತ್ರ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಪಂಚಾಯಿತಿ ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರ ಕಣ್ಣೆದುರೇ ನಡೆದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ರುದ್ರಪ್ಪ ಹಾಗೂ ಶಶಿಕಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಕಿತ್ತೂರು ಠಾಣೆಯ ಸಿಪಿಐ ಶಿವಾನಂದ ಗುಡಗನಟ್ಟಿ ಹಾಗೂ ಪಿಎಸ್‌ಐ ಭರತ್ ಎಸ್. ಗಂಗಾಧರ ಹಂಪಣ್ಣವರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಆರೋಪಿಗಳ ಪತ್ತೆ ಹಾಗೂ ಬಂಧನಕ್ಕೆ ತನಿಖೆ ನಡೆಸುತ್ತಿದ್ದಾರೆ.



