ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಥಳಿಸಿದ ಘಟನೆ ಸಂಬಂಧವಾಗಿ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ. ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಹುಕ್ಕೇರಿ ಪೊಲೀಸ್ ಠಾಣೆಯ ಪಿಎಸ್‌ಐ ನಿಖಿಲ್ ಕಾಂಬಳೆ ಅವರನ್ನು ಅಮಾನತು ಮಾಡಲಾಗಿದೆ.
ಜುನ್ 26 ರಂದು ಶ್ರೀರಾಮ ಸೇನೆ ಕಾರ್ಯಕರ್ತರು ಗೋವು ಸಾಗಿಸುತ್ತಿದ್ದ ವಾಹನವೊಂದನ್ನು ತಡೆದು, ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಗೋವುಗಳನ್ನು ಗೋ ಶಾಲೆಗೆ ಸಾಗಿಸಿದರೂ, ಪ್ರಕರಣ ದಾಖಲಿಸುವಲ್ಲಿ ವಿಫಲವಾಗಿದ್ದರು. ಜೊತೆಗೆ, ಸಂಬಂಧಿಸಿದ ವಿಷಯವನ್ನು ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿಲ್ಲ ಎಂದು ಆರೋಪಿಸಲಾಗಿದೆ.
ಇದೇ ಸಂದರ್ಭ, ಜಿಲ್ಲೆಯಿಂದ ಗಡೀಪಾರಾಗಿದ್ದ ಶ್ರೀರಾಮ ಸೇನೆ ಕಾರ್ಯಕರ್ತನೂ ಆಗಿರುವ ರೌಡಿಶೀಟರ್ ಮಹಾವೀರ ಎಂಬಾತನನ್ನು ಯಾವುದೇ ಕ್ರಮವಿಲ್ಲದೇ ಬಿಡುಗಡೆ ಮಾಡಲಾಗಿದೆ. ಈ ಎಲ್ಲಾ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಅವರು ಪಿಎಸ್‌ಐ ಕಾಂಬಳೆ ಅವರನ್ನು ಅಮಾನತು ಮಾಡುವ ಆದೇಶ ಮಂಗಳವಾರ ಹೊರಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ಬೆಳಗಾವಿಯಲ್ಲಿ ಪ್ರೇಮಿಗಳ ದಾರುಣ ಅಂತ್ಯ: ಆಟೊ ರಿಕ್ಷಾದಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ
ಈ ಘಟನೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಕಾರ್ಯಪದ್ಧತಿ ಮತ್ತು ನಿಷ್ಠೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಧಿಕಾರಿಗಳ ವಿರುದ್ಧ ಕ್ರಮ ಜರುಗುವ ಸಾಧ್ಯತೆ ಇದೆ.