ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸವದತ್ತಿ ಪಟ್ಟಣದ ಸರ್ಕಾರಿ ಮೌಲಾನಾ ಆಜಾದ್ ಮಾದರಿ ಶಾಲೆಗೆ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಎರಡು ಎಕರೆ ಸರ್ಕಾರಿ ನಿವೇಶನ ಮಂಜೂರು ಮಾಡುವಂತೆ ಸವದತ್ತಿ-ಯಲ್ಲಮ್ಮ ಕ್ಷೇತ್ರದ ಶಾಸಕ ವಿಶ್ವಾಸ್ ವಸಂತ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
2018-19ನೇ ಶೈಕ್ಷಣಿಕ ಸಾಲಿನಲ್ಲಿ ಆರಂಭಗೊಂಡಿರುವ ಈ ಶಾಲೆಯಲ್ಲಿ ಪ್ರಸ್ತುತ 6ರಿಂದ 10ನೇ ತರಗತಿವರೆಗೆ 260ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಯು ಸದ್ಯ ತಾಲೂಕು ಕ್ರೀಡಾಂಗಣದಲ್ಲಿರುವ ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆಯ ಹಳೆಯ ಜಿ.ಜಿ. ಚೋಪ್ರಾ ಶಾಲೆಯ 4-5 ಕೊಠಡಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸ್ಥಳಾವಕಾಶದ ಕೊರತೆಯಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ, ಸುರಕ್ಷತೆ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಸವದತ್ತಿ ಪಟ್ಟಣದಲ್ಲಿ ಅಥವಾ ಸಮೀಪದ ಪ್ರದೇಶದಲ್ಲಿ ಎರಡು ಎಕರೆ ಸರ್ಕಾರಿ ಜಾಗವನ್ನು ಶಾಲೆಯ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಮಂಜೂರು ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಈ ಕುರಿತು ಈಗಾಗಲೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು, ಕೆಡಿಪಿ ಸದಸ್ಯ ಬಾರಾ ಇಮಾಮ್ ಖನಗಾಂವಿ ಹಾಗೂ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರು ತಹಶೀಲ್ದಾರರು ಮತ್ತು ತಾಲೂಕು ದಂಡಾಧಿಕಾರಿಗಳಿಗೆ ಪತ್ರ ಬರೆದು ಅಗತ್ಯ ಕ್ರಮಕ್ಕೆ ಮನವಿ ಸಲ್ಲಿಸಿರುವ ದಾಖಲೆಗಳನ್ನು ಸಹ ಶಾಸಕರಿಗೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ನಿವೇಶನ ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬರಾ ಇಮಾಮ್ ಬೆಂಗಾಲಿ,ಆಸಿಫ್ ಭಾಗೊಜಿಕೊಪ್ಪ, ಪಕ್ರುಸಾಬ್ ದೊಡ್ಡಮನಿ, ಅಬಿಬ್ ದೊಡ್ಡವಾಡ, ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.




