ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಹೊರವಲಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬಳ ಸ್ಥಿತಿ ಚಿಂತಾಜನಕವಾಗಿದೆ.
ಮೃತ ಬಾಲಕಿಯನ್ನು ಜಯಶ್ರೀ ಕೋಟರೆ (11) ಎಂದು ಗುರುತಿಸಲಾಗಿದ್ದು, ಸಹೋದರಿ ಭಾಗ್ಯಶ್ರೀ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ಇಬ್ಬರೂ ಮೇಖಳಿ ಗ್ರಾಮದ ಅನುದಾನಿತ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಪ್ರತಿದಿನದಂತೆ ಶಾಲೆ ಮುಗಿಸಿ ಮನೆಗೆ ನಡೆದುಕೊಂಡು ಬರುತ್ತಿದ್ದ ವೇಳೆ, ನಾಗರಮುನ್ನೋಳಿ ಗ್ರಾಮದಿಂದ ರಾಯಬಾಗ ಪಟ್ಟಣದ ಕಡೆಗೆ ಅತಿವೇಗವಾಗಿ ಬರುತ್ತಿದ್ದ ಕಾರು ಮೇಖಳಿ ಗ್ರಾಮದ ಹೊರವಲಯದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಬಾಲಕಿಯರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಜಯಶ್ರೀ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾಳೆ.
ಗಂಭೀರವಾಗಿ ಗಾಯಗೊಂಡ ಭಾಗ್ಯಶ್ರೀಯನ್ನು ತಕ್ಷಣವೇ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ಮುಂದುವರಿದಿದೆ.
ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನನ್ನು ವಶಕ್ಕೆ ಪಡೆಯಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಗ್ಯಾಸ್ ಇಲ್ಲದೆ, ಸಾಲದ ಒತ್ತಡ: ಹೊಟೇಲ್ ಮಾಲೀಕ ಆತ್ಮಹತ್ಯೆ
ಘಟನೆಯ ಹಿನ್ನೆಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ, ಶಾಲಾ ಮಕ್ಕಳ ಸುರಕ್ಷತೆಗಾಗಿ ರಸ್ತೆಗಳಲ್ಲಿ ವೇಗ ನಿಯಂತ್ರಕಗಳನ್ನು ಅಳವಡಿಸುವಂತೆ ಒತ್ತಾಯಿಸಿದ್ದಾರೆ.



