ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಯುವಕನ ಪರವಾಗಿ ನಿಂತು ಸಂತ್ರಸ್ತೆಗೆ ಬೆದರಿಕೆ ಹಾಕಿದ ಆರೋಪದಡಿ ಕಾಂಗ್ರೆಸ್ ಮುಖಂಡೆ ಆಯೇಶಾ ಸನದಿ ವಿರುದ್ಧ ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾನಾಪುರ ಮೂಲದ ಬದ್ರುದ್ದಿನ್ ಕಿಲ್ಲೇದಾರ್ ಎಂಬಾತ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವತಿಯು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ ಮುಖಂಡೆ ಆಯೇಶಾ ಸನದಿ ಮಧ್ಯಪ್ರವೇಶಿಸಿ ಕಿರುಕುಳ ನೀಡಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಯುವತಿಯ ಖಾಸಗಿ ಕ್ಷಣಗಳ ಫೋಟೋ ಹಾಗೂ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ. ಅಲ್ಲದೆ, ಪ್ರಭಾವಿ ವ್ಯಕ್ತಿಗಳ ಪರಿಚಯವಿದ್ದು, ಪೊಲೀಸ್ ಠಾಣೆಯಲ್ಲೂ ತನ್ನ ಮಾತು ನಡೆಯುತ್ತದೆ ಎಂದು ಹೇಳಿ ಒತ್ತಡ ಹೇರಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಕಿರುಕುಳದಿಂದ ಮನನೊಂದ ಯುವತಿ ಕಳೆದ ಮಂಗಳವಾರ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಹಿನ್ನೆಲೆಯಲ್ಲಿ ಯುವತಿಯ ಪೋಷಕರು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಬದ್ರುದ್ದಿನ್ ಕಿಲ್ಲೇದಾರ್ ಹಾಗೂ ಆಯೇಶಾ ಸನದಿ ವಿರುದ್ಧ ದೂರು ದಾಖಲಿಸಿದ್ದಾರೆ.
ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ತನಿಖೆಯ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.



