ಬೆಳಗಾವಿಯ ಮಹಾಂತೇಶನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ವಸತಿ ನಿಲಯದಲ್ಲಿ ಬಿಸಿಎ ಓದುತ್ತಿದ್ದ ವಿದ್ಯಾರ್ಥಿನಿ ಶಿಲ್ಪಾ ಯರಮಸನಾಳ (ವಯಸ್ಸು 20) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಹಾವೇರಿ ಜಿಲ್ಲೆಯ ಶಿಗ್ಗಾಂವ ಮೂಲದ ಶಿಲ್ಪಾ, ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಬಿಸಿಎ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ವಿದ್ಯಾರ್ಥಿನಿ ಹಾಸ್ಟೆಲಿನ ಐದನೇ ಕೊಠಡಿಯಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆಯಿಂದ ಹಾಸ್ಟೆಲ್ ಆವರಣದಲ್ಲಿ ಆತಂಕ ಮತ್ತು ಶೋಕದ ವಾತಾವರಣ ನಿರ್ಮಾಣವಾಗಿದೆ.
ಆತ್ಮಹತ್ಯೆಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ ವಿದ್ಯಾರ್ಥಿನಿ ಯಾವುದೇ ಸೂಸೈಡ್ ನೋಟ್ ಬರೆದಿರಲಿಲ್ಲ. ಸ್ಥಳಕ್ಕೆ ಮಾಳಮಾರುತಿ ಪೊಲೀಸ್ ಠಾಣೆಯ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದು, ಶಿಲ್ಪಾ ಆತ್ಮಹತ್ಯೆಗೆ ನೂಕಿದ ಕಾರಣಗಳ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.