ಬೆಳಗಾವಿಯ ಆಝಮ್ ನಗರದಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಸೋಮವಾರ ದುರ್ಘಟನೆ ನಡೆದಿದೆ. ವಸತಿ ನಿಲಯದ ಕೊಠಡಿಯಲ್ಲಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹುಕ್ಕೇರಿ ತಾಲ್ಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ ನಾಯಕ (21) ಮೃತ ವಿದ್ಯಾರ್ಥಿನಿ. ಅವರು ಬಿ.ಎಸ್ಸಿ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದರು.
ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಕಾನ್‌ಸ್ಟೆಬಲ್ ಜತೆಗೆ ಕಾವೇರಿಯ ವಿವಾಹ ನಿಶ್ಚಯವಾಗಿತ್ತು ಎನ್ನಲಾಗಿದೆ. ಸೋಮವಾರವೇ ಅವರ ಜನ್ಮದಿನವಾಗಿದ್ದು, ಅದೇ ದಿನ ಆತ್ಮಹತ್ಯೆ ಮಾಡಿಕೊಂಡಿರುವುದು ಕುಟುಂಬಸ್ಥರು ಮತ್ತು ಸ್ನೇಹಿತರಲ್ಲಿ ಆಘಾತ ಮೂಡಿಸಿದೆ.
ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮಗಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಘಟನಾ ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಉಸ್ಮಾನ್ ಆವಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.




