ರಾಜ್ಯದ ಬರ ಪರಿಸ್ಥಿತಿಯನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಪಾದಯಾತ್ರೆ ನಡೆಸಲು ಮುಂದಾಗಿರುವ ಬಿಜೆಪಿ ನಾಯಕರಿಗೆ ಸಚಿವ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೋಳಿ ಅಥವಾ ಹುಂಜ ಕೂಗಿದ ತಕ್ಷಣ ಬೆಳಕಾಗುವುದಿಲ್ಲ. ಬೆಳಕು ಆಗಬೇಕಾದ ಸಮಯಕ್ಕೆ ತಾನಾಗಿಯೇ ಆಗುತ್ತದೆ” ಎಂದು ವ್ಯಂಗ್ಯವಾಡಿದರು.
ಬಿಜೆಪಿ ನಾಯಕರಿಗೆ ಹೆದರಿ ಸರ್ಕಾರ ಸದನ ಕರೆಯುವ ನಿರ್ಧಾರ ಕೈಗೊಳ್ಳುವುದಿಲ್ಲ. ರಾಜ್ಯದ ಜನರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ. ಬಿಜೆಪಿ ನಾಯಕರ ಬೆದರಿಕೆಗೆ ಸರ್ಕಾರ ಕೆಲಸ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಬರ ಪರಿಸ್ಥಿತಿಯನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಪಾದಯಾತ್ರೆ ನಡೆಸಲು ಮುಂದಾಗಿರುವುದು ರಾಜಕೀಯ ಉದ್ದೇಶದಿಂದ ಕೂಡಿದೆ ಎಂದು ಪರೋಕ್ಷವಾಗಿ ಟೀಕಿಸಿದ ಸವದಿ, ಜನರ ಹಿತಾಸಕ್ತಿ ಹಾಗೂ ರಾಜ್ಯದ ಸಮಸ್ಯೆಗಳಿಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದರು.
ಬರದಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಬಿಜೆಪಿ ನಾಯಕರು ಪಾದಯಾತ್ರೆ ನಡೆಸಿದ ಮಾತ್ರಕ್ಕೆ ಸರ್ಕಾರ ತನ್ನ ನಿರ್ಧಾರಗಳನ್ನು ಬದಲಿಸುವುದಿಲ್ಲ ಎಂದು ಅವರು ಹೇಳಿದರು.




