ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಭೂಸ್ವಾಧೀನಪಡಿಸಿಕೊಂಡಿರುವ ರೈತರ ಜಮೀನಿಗೆ ಮಾರುಕಟ್ಟೆ ದರದಂತೆ ಸಮರ್ಪಕ ಹಾಗೂ ಹೆಚ್ಚಿನ ಪರಿಹಾರ ನೀಡಬೇಕು. ಚಿಕ್ಕೋಡಿ ತಾಲೂಕಿನ ಸಮಗ್ರ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸಿ ರೈತರ ಕೃಷಿಗೆ ಶಾಶ್ವತ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಶುಕ್ರವಾರ ಸಾವಿರಾರು ರೈತರು ಬೃಹತ್ ಪ್ರತಿಭಟನೆ ನಡೆಸಿದರು.
ಚಿಕ್ಕೋಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೆಳಗ್ಗೆಯಿಂದಲೇ ಜಮಾಯಿಸಿದ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಎತ್ತಿನ ಬಂಡಿಗಳನ್ನು ಸಾಲಾಗಿ ನಿಲ್ಲಿಸಿ ಸಂಚಾರ ತಡೆದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಪೊಲೀಸರು ಪರ್ಯಾಯ ಮಾರ್ಗದಲ್ಲಿ ವಾಹನಗಳನ್ನು ಸಂಚರಿಸಲು ವ್ಯವಸ್ಥೆ ಮಾಡಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ರೈತ ಮುಖಂಡರು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಭೂಮಿ ಕಳೆದುಕೊಂಡ ಅನೇಕ ರೈತರಿಗೆ ಇನ್ನೂ ನ್ಯಾಯಸಮ್ಮತ ಪರಿಹಾರ ದೊರೆತಿಲ್ಲ. ಇದರಿಂದ ರೈತ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಸೂಕ್ತ ಪರಿಹಾರ ವಿತರಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಿ ಕೃಷಿಗೆ ಅಗತ್ಯ ನೀರು ಒದಗಿಸಬೇಕು ಎಂದು ಆಗ್ರಹಿಸಿದರು.
ಈ ಬೃಹತ್ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಶಶಿಕಾಂತ ಗೂರೂಜಿ, ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜೇರಿ, ಉಪಾಧ್ಯಕ್ಷ ಸತ್ಯಪ್ಪ ಮಲ್ಲಾಪೂರೆ, ಚಿಕ್ಕೋಡಿಯ ಸಂಪಾದನಾ ಸ್ವಾಮೀಜಿ, ಚಿಂಚಣಿಯ ಶಿವಪ್ರಸಾದ ದೇವರು ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾವಿರಾರು ರೈತರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.



