ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಹೊರವಲಯದಲ್ಲಿ ಭಾನುವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಜಯಪುರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಖಾಸಗಿ ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತರು ಕಲಬುರಗಿ ಜಿಲ್ಲೆಯ ಅಫ್ಜಲ್ಪುರ ತಾಲೂಕು ಮೂಲದವರಾಗಿದ್ದು, ಕೊಲ್ಲಾಪುರದ ಮಹಾಲಕ್ಷ್ಮಿ ದೇವಿಯ ದರ್ಶನದಿಂದ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ.
ಘಟನೆಯಲ್ಲಿ ಗಿರೀಶ ಬಳ್ಳೋರಗಿ, ರಾಹುಲ್ ಮ್ಯಾಲೇಶಿ ಹಾಗೂ ಸಂಗು ಅಮರಗೊಂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಜೊತೆಗೆ ಪ್ರಯಾಣಿಸುತ್ತಿದ್ದ ರಾಧಿಕಾ ಮ್ಯಾಲೇಶಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ವಿಜಯಪುರ ಕೆಎಸ್‌ಆರ್‌ಟಿಸಿ ಡಿಪೋಗೆ ಸೇರಿದ್ದರೆಂದು ತಿಳಿದುಬಂದಿದೆ. ಅಪಘಾತದ ನಂತರ ಸ್ಥಳಕ್ಕೆ ಅಥಣಿ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.