ಬೆಳಗಾವಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-48ರ ಸ್ಥವನಿಧಿ ಘಾಟ್ ಸಮೀಪ ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಮಹಾರಾಷ್ಟ್ರದ ಕೊಲ್ಲಾಪುರ ನಿವಾಸಿ ಸೋಯಲ್ ಮುನೇರ (36) ಹಾಗೂ ಇಂಚಲಕರಂಜಿ ಗ್ರಾಮದ ವಿನಯ ಪಾಟೀಲ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಬ್ರೇಕ್ ವೈಫಲ್ಯಗೊಂಡ ಟ್ರಕ್ ಮುಂದೆ ಸಾಗುತ್ತಿದ್ದ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ನಿಪ್ಪಾಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.




