ಮುಂಗಾರು ಮಳೆ ಕೊರತೆಯಿಂದಾಗಿ ಜಿಲ್ಲೆಯ ಯರಗಟ್ಟಿ, ಸವದತ್ತಿ ಹಾಗೂ ರಾಮದುರ್ಗ ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ (ಆ.16) ಮೂರು ತಾಲ್ಲೂಕುಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ಜೂನ್ ತಿಂಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದ ಪರಿಣಾಮ ಹೆಸರು, ತೊಗರಿ, ಗೋವಿನಜೋಳ ಸೇರಿದಂತೆ ವಿವಿಧ ಬೆಳೆಗಳು ಸಮರ್ಪಕವಾಗಿ ಬೆಳೆಯದೆ ರೈತರು ನಷ್ಟ ಅನುಭವಿಸುವಂತಾಗಿದೆ. ಬೆಳೆ ಬೆಳೆಯಲು ಮಾಡಿರುವ ಖರ್ಚು ಕೈಗೂಡದೆ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.
ಯರಗಟ್ಟಿ, ಸವದತ್ತಿ ಹಾಗೂ ರಾಮದುರ್ಗ ತಾಲ್ಲೂಕುಗಳಿಗೆ ಭೇಟಿ ನೀಡಿ ರೈತರ ಬೆಳೆಗಳ ಸ್ಥಿತಿ ಹಾಗೂ ಮಳೆ ಕೊರತೆಯಿಂದ ಉಂಟಾಗಿರುವ ನಷ್ಟದ ಕುರಿತು ಮಾಹಿತಿ ಪಡೆಯಲಾಗುವುದು. ಬಳಿಕ ಬರ ಪರಿಸ್ಥಿತಿಯ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.



