ಬೆಳಗಾವಿ ಚಳಿಗಾಲದ ಅಧಿವೇಶನದ ವೇಳೆ ಪ್ರತ್ಯೇಕ ಚಿಕ್ಕೋಡಿ ಜಿಲ್ಲೆ ರಚನೆಯ ಬೇಡಿಕೆಗೆ ಮತ್ತಷ್ಟು ಬಲ ತುಂಬಲು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದು ಸಂಸದೆ ಪ್ರಿಯಾಂಕ ಜಾರಕಿಹೊಳಿ ತಿಳಿಸಿದ್ದಾರೆ.
ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ವಿವಿಧ ತಾಲೂಕುಗಳ ಜನರು ಪ್ರತ್ಯೇಕ ಜಿಲ್ಲೆ ರಚನೆಗಾಗಿ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚಿಕ್ಕೋಡಿ ಜಿಲ್ಲೆ ರಚನೆಗೆ ಮೊದಲ ಆದ್ಯತೆ ನೀಡಲಾಗುವುದು. ಈ ಬೇಡಿಕೆ ಈಡೇರಿಸಲು ಅಗತ್ಯ ರಾಜಕೀಯ ಹಾಗೂ ಆಡಳಿತಾತ್ಮಕ ಪ್ರಯತ್ನಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಚಿಕ್ಕೋಡಿ ಭಾಗದ ಮಾಜಿ ಸೈನಿಕರು ಹಾಗೂ ಸೈನಿಕರ ಕುಟುಂಬಗಳಿಗೆ ಅನುಕೂಲವಾಗುವಂತೆ ಮಿಲಿಟರಿ ಕ್ಯಾಂಟೀನ್ ಮಂಜೂರಾತಿಗಾಗಿ ಕ್ರಮ ಕೈಗೊಳ್ಳಲಾಗುವುದು. ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೂ ಆದ್ಯತೆ ನೀಡಲಾಗಿದ್ದು, ಜಲಜೀವನ್ ಮಿಷನ್ ಯೋಜನೆಯಡಿ ಮನೆಗಳಿಗೆ ನಳ ಸಂಪರ್ಕ ಕಲ್ಪಿಸಿದರೂ ಸಮರ್ಪಕ ನೀರು ಪೂರೈಕೆಯಾಗದಿರುವ ಸಮಸ್ಯೆ ಗಮನದಲ್ಲಿದೆ. ಈ ಹಿನ್ನೆಲೆಯಲ್ಲಿ ಸಂಸದರ ಅನುದಾನದಡಿ ಬೋರ್‌ವೆಲ್‌ಗಳನ್ನು ಕೊರೆಸುವ ಮೂಲಕ ನೀರಿನ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ವಿಶೇಷ ಮಸೂದೆಗಳನ್ನು ಮಂಡಿಸುತ್ತಿರುವ ಹಿನ್ನೆಲೆಯಲ್ಲಿ ಕಲಾಪದಲ್ಲಿ ಭಾಗವಹಿಸಲಿದ್ದೇನೆ. ಆದರೆ, ಕೇಂದ್ರ ಸರ್ಕಾರ ಪ್ರತಿಪಕ್ಷಗಳ ನಾಯಕರ ನಡುವೆ ಭಿನ್ನಾಭಿಪ್ರಾಯ ಮೂಡಿಸುವುದರ ಜೊತೆಗೆ ಭಯದ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಇಂತಹ ರಾಜಕೀಯ ನಡೆ ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಅವರು ಟೀಕಿಸಿದರು.



