ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಬೆಳಗಾವಿ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಬೆಳಗಾವಿ, ಉತ್ತರ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ 64.5 ರಿಂದ 115.4 ಮಿ.ಮೀ ವರೆಗೆ ಮಳೆ ಆಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆಗಸ್ಟ್ 13ರ ಗುರುವಾರವೂ ಉತ್ತರ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ.
ಇದಲ್ಲದೇ ಉತ್ತರ ಕನ್ನಡ, ಉಡುಪಿ, ಹಾಗೂ ಚಿಕ್ಕಮಗಳೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಆಗಸ್ಟ್ 13ರ ಗುರುವಾರವೂ ಮಳೆಯಾಗಲಿದೆ. ಈ ಎರಡು ದಿನವೂ ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಕರ್ನಾಟಕ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬುಧವಾರ ಸಂಜೆ ನಂತರ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.



