ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 15 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಮೃತ ಬಾಲಕ ಗೌತಮ್ ಭಜಂತ್ರಿ ಎಂದು ಗುರುತಿಸಲಾಗಿದೆ. ವಸತಿ ಶಾಲೆಯ ಕೊಠಡಿಯೊಂದರ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ವಸತಿ ಶಾಲೆಯ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಲಕನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗೆ ಧಾವಿಸಿದ್ದಾರೆ.
ಘಟನೆಯ ಕುರಿತು ಬಾಲಕನ ತಾಯಿ ಲಕ್ಷ್ಮೀಬಾಯಿ ಭಜಂತ್ರಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
”ನಮ್ಮ ಮಗ ಆತ್ಮಹತ್ಯೆ ಮಾಡಿಕೊಳ್ಳುವಂತಹ ಮನಸ್ಥಿತಿಯವನಲ್ಲ. ಶಾಲೆಯಲ್ಲೇ ಆತನ ಮೇಲೆ ತೀವ್ರ ಹಲ್ಲೆ ನಡೆಸಿ ಕೊಲೆ ಮಾಡಿ, ನಂತರ ಕಿಟಕಿಗೆ ನೇಣುಹಾಕಿ ಆತ್ಮಹತ್ಯೆಯಂತೆ ಬಿಂಬಿಸುವ ಹುನ್ನಾರ ನಡೆದಿದೆ” ಎಂದು ಕಣ್ಣೀರಿಟ್ಟಿದ್ದು, ನ್ಯಾಯಕ್ಕಾಗಿ ಪಟ್ಟುಹಿಡಿದಿದ್ದಾರೆ.
ಬೆಳಗಾವಿ ಜಿಲ್ಲೆಯ ಸಮಾಜದ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ”ಇಲಾಖೆಯಿಂದ ನಾವೂ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳ ಮಹಜರು ಮಾಡಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೋಷಕರ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಲಾಗುತ್ತದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ” ಎಂದು ಸುದ್ದಿಗಾರರ ಜತೆ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಉಡುಪಿ | ಮಗನಿಂದಲೇ ತಂದೆ-ತಾಯಿ ಹತ್ಯೆ, ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸಿದ ಘಟನೆ
ಘಟನೆ ಕುರಿತ ಮಾಹಿತಿಗಾಗಿ ಈ ದಿನ.ಕಾಮ್ ಸಮಾಜದ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ ಅವರನ್ನು ಸಂಪರ್ಕಿಸಿದೆಯಾದರೂ ಕರೆಗೆ ಲಭ್ಯವಾಗಿಲ್ಲ.
ಘಟನೆ ಸಂಬಂಧ ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




