ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮ ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಳೆಯ ಪ್ರಭಾವ ಇಂದು (ಏಪ್ರಿಲ್ 11) ರಿಂದ ಏಪ್ರಿಲ್ 17ರವರೆಗೆ ಮುಂದುವರಿಯಲಿದೆ.
ಕರಾವಳಿಯಲ್ಲಿ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಬೆಂಗಳೂರಿನಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸಹ ತೀವ್ರ ಮಳೆಯಾಗುವ ನಿರೀಕ್ಷೆಯಿದೆ.
ಇದೇ ಸಂದರ್ಭದಲ್ಲಿ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಮಲ್ಲೇಶ್ವರಂ ಹವಾಮಾನ ಕೇಂದ್ರದ ತಜ್ಞ ಸಿ.ಎಸ್. ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.
ಚಂಡಮಾರುತದ ಪರಿಣಾಮವಾಗಿ ರಾಜ್ಯದ ಹಲವೆಡೆ ಹವಾಮಾನ ಅಸ್ಥಿರವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಮುಂಜಾಗ್ರತೆ ವಹಿಸಲು ಹವಾಮಾನ ಇಲಾಖೆ ಸೂಚಿಸಿದೆ.