ರಾಜ್ಯದ ಅತಿದೊಡ್ಡ ಜಿಲ್ಲೆಯಾದ ಬೆಳಗಾವಿಯಿಂದ ಕಾಂಗ್ರೆಸ್‌ನ 11 ಶಾಸಕರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಇನ್ನೂ ಎರಡು ಸಚಿವ ಸ್ಥಾನಗಳು ದೊರೆಯುವ ನಿರೀಕ್ಷೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಂಪುಟ ವಿಸ್ತರಣೆ ಕುರಿತು ಪಕ್ಷದ ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ” ಎಂದು ಹೇಳಿದರು.
“ಜಿಲ್ಲೆಯಿಂದ ಮತ್ತೆ ಯಾರಿಗೆ ಸಚಿವ ಸ್ಥಾನ ಸಿಗಲಿದೆ?” ಎಂಬ ಪ್ರಶ್ನೆಗೆ, “ಅದನ್ನು ಮುಖ್ಯಮಂತ್ರಿಗಳನ್ನೇ ಕೇಳಿ” ಎಂದು ಪ್ರತಿಕ್ರಿಯಿಸಿದರು.
ಗೃಹಲಕ್ಷ್ಮಿ ಯೋಜನೆ ಕುರಿತು ಮಾತನಾಡಿದ ಅವರು, “ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ವಿಶ್ವಕ್ಕೆ ಮಾದರಿಯಾಗಿದೆ. ಅದರ ಯಶಸ್ಸನ್ನು ಗಮನಿಸಿ ಎನ್‌ಡಿಎ ಆಡಳಿತವಿರುವ ಕೆಲವು ರಾಜ್ಯಗಳೂ ಇದೇ ಮಾದರಿಯ ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ಯೋಜನೆ ಕುರಿತು ವಿಪಕ್ಷಗಳು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ” ಎಂದು ಸ್ಪಷ್ಟಪಡಿಸಿದರು.



