ಸಮಾಜದಲ್ಲಿ ಜೀತ ಪದ್ಧತಿ, ಮಾನವ ಕಳ್ಳ ಸಾಗಾಣಿಕೆ ಶಿಕ್ಷಾರ್ಹ ಅಪರಾಧವಾಗಿದ್ದು, ಇವುಗಳನ್ನು ಬುಡ ಸಮೇತ ಕಿತ್ತೊಗೆಯಲು ಇಲಾಖೆಗಳೊಂದಿಗೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಬಳ್ಳಾರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ ಜಿ ಶಾಂತಿ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ಜೀತ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಅಯೋಜಿಸಲಾಗಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, “ಆರ್ಥಿಕ ಸ್ಥಿತಿ ಕಡಿಮೆಯಾದಾಗ ಜೀತ ಪದ್ಧತಿಯು ಉಲ್ಬಣಗೊಳ್ಳುತ್ತದೆ. ಪೂರ್ವಜರ ಕಾಲದಲ್ಲಿ ಜೀತ ಪದ್ದತಿಯು ಆಳವಾಗಿ ಬೇರೂರಿತ್ತು. ಸ್ವಾತಂತ್ರ್ಯದ ನಂತರ ಗಣನೀಯವಾಗಿ ಕಡಿಮೆಯಾಗಿದೆ. 14 ವರ್ಷದೊಳಗಿನ ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳುವುದು ಕಾನೂನು ಬಾಹಿರವಾಗಿದೆ. ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಶಿಕ್ಷಣದಿಂದ ಮಾತ್ರ ಜೀತ ಪದ್ಧತಿ ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯ” ಎಂದು ತಿಳಿಸಿದರು.
“ಸಂವಿಧಾನವು ಪ್ರತಿಯೊಬ್ಬರಿಗೂ ಘನತೆಯಿಂದ ಬದುಕುವ ಹಕ್ಕು ನೀಡಿದೆ. ಸರ್ಕಾರವು ಶಿಕ್ಷಣ ಸೇರಿದಂತೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದೆ. ಇವುಗಳ ಸದ್ಬಳಕೆಯಾಗಬೇಕು. ಜೀತ ಪದ್ಧತಿ ನಿರ್ಮೂಲನೆಗಾಗಿಯೇ ವಿವಿಧ ಇಲಾಖೆಗಳ ಜೊತೆಗೂಡಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ವಿದ್ಯಾರ್ಥಿಗಳು ಸಹ ಜೀತ ಪದ್ಧತಿಯ ನಿಷೇಧದ ಬಗ್ಗೆ ನಿಮ್ಮ ಸ್ನೇಹಿತರಿಗೂ ತಿಳಿಸಬೇಕು. ಮನೆಯ ಅಕ್ಕ-ಪಕ್ಕದ ನೆರೆಹೊರೆಯವರೊಂದಿಗೂ ಮಾಹಿತಿ ಹಂಚಿಕೊಳ್ಳಬೇಕು. ಜೀತ ಪದ್ಧತಿ ಇರುವುದು ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು” ಎಂದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾತನಾಡಿ, “14 ವರ್ಷದೊಳಗಿನ ಎಲ್ಲಾ ಮಕ್ಕಳು ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಬೇಕು. ಜಿಲ್ಲೆಯಲ್ಲಿ ಜೀತ ಪದ್ಧತಿ ಇಲ್ಲ. ಅನಿರ್ದಿಷ್ಟ ವಲಯ ಹಾಗೂ ಇತರೆ ಕೈಗಾರಿಕಾ ವಲಯಗಳಲ್ಲಿ ಜೀತ ಪದ್ಧತಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಬೇಕು” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ?: ಬಳ್ಳಾರಿ | ಬಗರ್ ಹುಕುಂ ಬಡ ಸಾಗುವಳಿದಾರರ ತಿರಸ್ಕೃತ ಅರ್ಜಿಗಳ ಪುನರ್ ಪರಿಶೀಲಿಸಲು ಮನವಿ
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ್ ನಿಕಟಪೂರ್ವ ಸದಸ್ಯ ಎಚ್ ಸಿ ರಾಘವೇಂದ್ರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ ಮೌನೇಶ್, ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಲಾ ಮಕ್ಕಳು, ಮತ್ತಿತರರು ಉಪಸ್ಥಿತರಿದ್ದರು.
