ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ಮತ್ತು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವ ಕಾರ್ಯಕ್ರಮವನ್ನು ಬಳ್ಳಾರಿ ಜಿಲ್ಲಾ ಕೇಂದ್ರದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.
ಮಹನೀಯರ ಜಯಂತೋತ್ಸವ ಕಾರ್ಯಕ್ರಮ ಆಚರಿಸುವ ಕುರಿತು ಏರ್ಪಡಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿ, “ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರ ಜಗಜೀವನ ರಾಂ ಅವರ 118ನೇ ಜಯಂತೋತ್ಸವವನ್ನು ಏ.05 ರಂದು ಮತ್ತು ಭಾರತ ರತ್ನ ಅಂಬೇಡ್ಕರ್ ಅವರ 134ನೇ ಜಯಂತೋತ್ಸವವನ್ನು ಏ.14 ರಂದು ಅದ್ದೂರಿಯಾಗಿ ಆಚರಿಸಲು ಬೇಕಾದ ಸಕಲ ಸಿದ್ಧತೆ ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
“ಶಿಷ್ಠಾಚಾರದನ್ವಯ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಎಲ್ಲಾ ಗಣ್ಯರನ್ನು ಆಹ್ವಾನಿಸಬೇಕು. ಮಹನೀಯರ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸಲು ತಜ್ಞರಿಂದ ವಿಶೇಷ ಉಪನ್ಯಾಸ ಆಯೋಜಿಸಬೇಕು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ವೇದಿಕೆ ಕಾರ್ಯಕ್ರಮದಲ್ಲಿ ಅಭಿನಂದಿಸಲು ಸನ್ಮಾನ ಕಾರ್ಯಕ್ರಮ ಆಯೋಜಿಸಬೇಕು ಎಂದು ತಿಳಿಸಿದ ಅವರು, ಜಯಂತಿ ಕಾರ್ಯಕ್ರಮಗಳಂದು ನಡೆಯುವ ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಸಹಕಾರದಲ್ಲಿ ಸ್ತಬ್ಧಚಿತ್ರಗಳನ್ನು ರೂಪಿಸಬೇಕು” ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಮಾತನಾಡಿ, “ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪರಿಣಾಮಕಾರಿಯಾಗಿ, ಅಚ್ಚುಕಟ್ಟಾಗಿ ಆಯೋಜಿಸುವಂತೆ ನಿರ್ದೇಶನ ನೀಡಲಾಗುವುದು” ಎಂದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಮಾತನಾಡಿ, “ಮಹನೀಯರ ಜಯಂತಿ ಅಂಗವಾಗಿ ನಗರದಲ್ಲಿ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಮತ್ತು ಕಲಾವಿದರ ತಂಡಗಳನ್ನೊಳಗೊಂಡು ಅದ್ದೂರಿ ಮೆರವಣಿಗೆ ಆಯೋಜಿಸಲಾಗುವುದು” ಎಂದರು.
ಇದನ್ನೂ ಓದಿ: ಬಳ್ಳಾರಿ | ಬಗರ್ ಹುಕುಂ ಬಡ ಸಾಗುವಳಿದಾರರ ತಿರಸ್ಕೃತ ಅರ್ಜಿಗಳ ಪುನರ್ ಪರಿಶೀಲಿಸಲು ಮನವಿ
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಆಹಾರ ಇಲಾಖೆಯ ಉಪನಿರ್ದೇಶಕಿ ಸಕೀನಾ ಸೇರಿದಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
