ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ತೆಕ್ಕಾರು ಭಟ್ರಬೈಲು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೆಕ್ಕಾರು ಗ್ರಾಮದ ಭಟ್ರಬೈಲಿನ ದೇವರಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿದ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮ ಏಪ್ರಿಲ್ 25ರಿಂದ ಮೇ 3ರವರೆಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಕೊನೆಯ ದಿನವಾದ ಮೇ 3ರಂದು ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಾಸಕ ಹರೀಶ್ ಪೂಂಜಾ, ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಉಪ್ಪಿನಂಗಡಿ ನಿವಾಸಿ ಎಸ್.ಎಂ.ಎಸ್.ಇಬ್ರಾಹೀಂ ಮುಸ್ಲಿಯಾರ್ ಎಂಬವರು ನೀಡಿದ ದೂರಿನ ಆಧಾರದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹರೀಶ್ ಪೂಂಜಾ ಅವರು ದ್ವೇಷ ಭಾಷಣ ಮಾಡಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ; “ತೆಕ್ಕಾರಿನ ಕಂಟ್ರಿ ಬ್ಯಾರಿಗಳು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಾಕಿದ ಟ್ಯೂಬ್ ಲೈಟನ್ನು ಹೊಡೆದು ಹಾಕುತ್ತಾರೆ, ಡೀಸೆಲ್ ಕದಿಯುತ್ತಿದ್ದಾರೆ. ದೇವಾಲಯದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಮುಸ್ಲಿಂ ಮಸೀದಿಗಳಿಗೆ ಏಕೆ ನೀಡಿದ್ದೀರಿ? ನಮಗೂ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ. ನೀವು ಮುಸ್ಲಿಮರಿಗೆ ಆಹ್ವಾನ ಪತ್ರಿಕೆ ನೀಡಿದ್ದರಿಂದಲೇ ಅವರು ಟ್ಯೂಬ್ ಲೈಟ್ ಹೊಡೆದು ಹಾಕಿದ್ದಾರೆ” ಎಂದು ಪೂಂಜಾ ಹೇಳಿದ್ದಾರೆ.
ರೌಡಿ ಶೀಟರ್ ಸುಹಾಸ್ ಶೆಟ್ಟಿಯ ಹತ್ಯೆಯ ನಂತರ ಕರಾವಳಿಯಲ್ಲಿ ಉಂಟಾಗಿದ್ದ ಭಯದ ವಾತಾವರಣದ ಕಾರಣದಿಂದಾಗಿ ಜಿಲ್ಲೆಯಲ್ಲಿ 163 ಸೆಕ್ಷನ್ ಜಾರಿಗೊಳಿಸಲಾಗಿದೆ. ಈ ನಡುವೆಯೂ ಶಾಸಕ ಹರೀಶ್ ಪೂಂಜಾ ದ್ವೇಷ ಭಾಷಣ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರಗಿಸಬೇಕು ಎಂದು ಎಂದು ಎಸ್.ಎಂ.ಎಸ್.ಇಬ್ರಾಹಿಂ ಮುಸ್ಲಿಯಾರ್ ಉಪ್ಪಿನಂಗಡಿ ಠಾಣೆಗೆ ದೂರಿನಲ್ಲಿ ಆಗ್ರಹಿಸಿದ್ದು, ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.