ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ‘ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ (ಸ) ಶೀರ್ಷಿಕೆಯಡಿ ಸೆ.3ರಿಂದ14 ವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ಬೆಳ್ತಂಗಡಿಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್‌ನಿಂದ ‘ಧಾರ್ಮಿಕ ಸೌಹಾರ್ದ ಸವಾಲುಗಳು ಮತ್ತು ಅವಕಾಶಗಳು’ ವಿಚಾರಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದು ಜ.ಇ.ಹಿಂದ್, ಮಂಗಳೂರು ಉತ್ತರ ಅಧ್ಯಕ್ಷರಾದ ಸಿಎ ಇಸ್ಹಾಕ್ ಪುತ್ತೂರು ಹೇಳಿದರು.
ಅವರು ಬೆಳ್ತಂಗಡಿ ಜಮಾಅತೆ ಇಸ್ಲಾಮೀ ಹಿಂದ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರವಾದಿ ಮುಹಮ್ಮದ್ (ಸ) ನ್ಯಾಯ ಮತ್ತು ಮಾನವೀಯತೆಯ ಸಂದೇಶಗಳನ್ನು ನಾಡಿನ ಜನತೆಗೆ ತಲುಪಿಸುವುದು, ಪ್ರವಾದಿಯವರ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು , ವಿವಿಧ ಧರ್ಮೀಯರ ನಡುವಿನ ಪರಸ್ಪರ ಸಂಬಂಧಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶ ಎಂದರು.
ಈ ಕಾರ್ಯಕ್ರಮ ಪ್ರಯುಕ್ತ ಸಂವಾದ, ವಿಚಾರಗೋಷ್ಠಿ, ಸಾರ್ವಜನಿಕ ಸಭೆ, ಪ್ರಬಂಧ ಸ್ಪರ್ಧೆ, ಮುಸ್ಲಿಮ್ ಮುಖಂಡರ ಸಭೆ, ಜಿಲ್ಲಾ ಸಮಾವೇಶ,ದೇಶ ಬಾಂಧವರೊಂದಿಗೆ ವಿಚಾರ ವಿನಿಮಯ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಬಳಿಕ ಮಾತನಾಡಿದ ಸಮಾವೇಶದ ಸಂಚಾಲಕರಾದ ಅಮೀನ್ ಅಹ್ಸನ್, ‘ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಭಿಯಾನ ಪ್ರಯುಕ್ತ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅದರ ಭಾಗವಾಗಿ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಸೆಪ್ಟೆಂಬರ್ 7 ರವಿವಾರದಂದು ಸಾರ್ವಜನಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸಮಾಜದ ಪ್ರಮುಖರು, ಧಾರ್ಮಿಕ ನಾಯಕರು ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

ಸಾರ್ವಜನಿಕ ಸಮಾವೇಶವನ್ನು ಮೂಡಬಿದಿರೆ ದಿಗಂಬರ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಬಿ ಕೆ ಹರಿಪ್ರಸಾದ್, ಕೆ ಪ್ರತಾಪ ಸಿಂಹ ನಾಯಕ್, ಕೆಪಿಸಿಸಿ ವಕ್ತಾರರಾದ ನಿಕೇತ್ ರಾಜ್ ಮೌರ್ಯ, ಬೆಳ್ತಂಗಡಿಯ ರಾಜಕೀಯ ಹಾಗೂ ಸಾಮಾಜಿಕ ಮುಖಂಡ ರಕ್ಷಿತ್ ಶಿವರಾಂ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ ವಹಿಸಲಿದ್ದಾರೆ ಎಂದು ತಿಳಿಸಿದರು.
ಸಾರ್ವಜನಿಕ ಸಮಾವೇಶಕ್ಕೂ ಮುನ್ನ ಬೆಳ್ತಂಗಡಿ ಬಸ್ ನಿಲ್ದಾಣದಿಂದ ಸಭಾಂಗಣದವರೆಗೆ ಧಾರ್ಮಿಕ ಸೌಹಾರ್ದ ಕಾಲ್ನಡಿಗೆ ಜಾಥಾ ಇರಲಿದೆ. ಈ ಸಂದರ್ಭದಲ್ಲಿ ಧಾರ್ಮಿಕ ಪರಿಷತ್ ಸದಸ್ಯರಾದ ಲಕ್ಷ್ಮೀಶ ಗಬಲಡ್ಕ, ಕ್ರೈಸ್ತ ಧರ್ಮಗುರುಗಳಾದ ಫಾದರ್ ವಿನೋದ್ ಮಸ್ಕರೇನಸ್, ಬೋಳಂಗಡಿ ಹವ್ವಾ ಜುಮಾ ಮಸೀದಿಯ ಖತೀಬರಾದ ಮೌಲಾನಾ ಯಹ್ಯಾ ತಂಙಳ್ ಮದನಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪೈಗಂಬರ್ ಮುಹಮ್ಮದ್ ಅವರ ಬಗೆಗಿನ ಎರಡು ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.
ಸುದ್ದಿಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾ ಸಂಚಾಲಕ ಅಬ್ದುಲ್ ಕರೀಮ್ ಉಳ್ಳಾಲ, ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝಷನ್ ಜಿಲ್ಲಾ ಸಂಚಾಲಕ ರಿಝ್ವಾನ್ ಅಝ್ಹರಿ, ಸಾಮಾಜಿಕ ಕಾರ್ಯಕರ್ತರಾದ ಉಮರ್ ಶಾಫಿ ಬಂಗಾಡಿ, ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಜಿಲ್ಲಾ ಸಂಚಾಲಕ ಯೂಸುಫ್ ಅಸ್ಲಮ್, ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗ ಜಿಲ್ಲಾ ಸಂಚಾಲಕಿ ಸಾಜಿದಾ ಮೂಮಿನ್ ಉಪಸ್ಥಿತರಿದ್ದರು.

