ಹೊರನಾಡು ಮತ್ತು ಗಡಿನಾಡು ಕನ್ನಡಿಗರು ಎಂಬ ವ್ಯಾಖ್ಯಾನದ ಕುರಿತು ಹಲವು ವರ್ಷಗಳಿಂದ ಉಂಟಾಗಿರುವ ಗೊಂದಲಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಹೊರನಾಡು-ಗಡಿನಾಡು ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಮಹತ್ವದ ಸಭೆಯಲ್ಲಿ ತೆಲಂಗಾಣ, ಮಹಾರಾಷ್ಟ್ರ, ಆಂಧ್ರಪ್ರದೇಶ, ಗೋವಾ ಹಾಗೂ ಕಾಸರಗೋಡು ಸೇರಿದಂತೆ ವಿವಿಧ ಪ್ರದೇಶಗಳ ಕನ್ನಡ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿ ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ಮಂಡಿಸಿದರು.
ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ವಹಿಸಿ, ಹೊರನಾಡು ಮತ್ತು ಗಡಿನಾಡು ಕನ್ನಡಿಗರ ಕುರಿತು ಸ್ಪಷ್ಟ ಹಾಗೂ ಸಮಗ್ರ ವ್ಯಾಖ್ಯಾನ ರೂಪಿಸುವ ಉದ್ದೇಶದಿಂದ ವಿವಿಧ ಸಂಘಟನೆಗಳ ಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಲಿಸಲಿಸಿದರು.
ಸಭೆಯಲ್ಲಿ ವಿವಿಧ ರಾಜ್ಯಗಳಲ್ಲಿ ನೆಲೆಸಿರುವ ಕನ್ನಡಿಗರ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಭಾಷಿಕ ಪರಿಸ್ಥಿತಿಯನ್ನು ಪರಿಗಣಿಸಿ ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಸೂಕ್ತವಾದ ವ್ಯಾಖ್ಯಾನ ರೂಪಿಸಬೇಕೆಂಬ ಅಭಿಪ್ರಾಯ ವ್ಯಕ್ತವಾಯಿತು.
ಅಧ್ಯಕ್ಷ ಸೋಮಣ್ಣ ಬೇವಿನಮರದ ಮಾತನಾಡಿ, “ಪ್ರತಿನಿಧಿಗಳು ನೀಡಿದ ಸಲಹೆಗಳನ್ನು ಕ್ರೋಢೀಕರಿಸಿ ಸಮಗ್ರ ರೂಪದಲ್ಲಿ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಸರ್ಕಾರಗಳಿಗೆ ಸಲ್ಲಿಸಲಾಗುವುದು. ಈ ಮೂಲಕ ಹೊರನಾಡು-ಗಡಿನಾಡು ಕನ್ನಡಿಗರ ವ್ಯಾಖ್ಯಾನಕ್ಕೆ ಸಂಬಂಧಿಸಿದ ಗೊಂದಲಕ್ಕೆ ತೆರೆ ಎಳೆಯಲು ಕ್ರಮ ಕೈಗೊಳ್ಳಲಾಗುವುದು” ಎಂದು ನೀಡಿದರು.
ಹೊರನಾಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ತಮ್ಮ ಭಾಷೆ, ಸಂಸ್ಕೃತಿ ಮತ್ತು ಕನ್ನಡತನವನ್ನು ಉಳಿಸಿಕೊಳ್ಳಲು ನಡೆಸುತ್ತಿರುವ ಪ್ರಯತ್ನಗಳಿಗೆ ಸರ್ಕಾರದ ಮಟ್ಟದಲ್ಲಿ ಸೂಕ್ತ ಮಾನ್ಯತೆ ಹಾಗೂ ಬೆಂಬಲ ದೊರೆಯಬೇಕು ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಸರ್ವರು ಒಕ್ಕೊರಲಿನಿಂದ ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ತೆಲಂಗಾಣ ರಾಜ್ಯದಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗಾಗಿ ವಿಶೇಷ ಯೋಜನೆ ರೂಪಿಸುವಂತೆ ಸಂಘದ ವತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

“ತೆಲಂಗಾಣದಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಹಲವು ವರ್ಷಗಳಿಂದ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಮಹತ್ವದ ಕೊಡುಗೆ ನೀಡುತ್ತಿವೆ. ಆದರೆ ಮೂಲಸೌಕರ್ಯಗಳ ಕೊರತೆ, ವಿದ್ಯಾರ್ಥಿಗಳ ಸಂಖ್ಯೆ ಕುಸಿತ ಹಾಗೂ ಸರ್ಕಾರದ ಸಮರ್ಪಕ ಬೆಂಬಲದ ಅಭಾವದಿಂದ ಈ ಶಾಲೆಗಳು ಸಂಕಷ್ಟ ಎದುರಿಸುತ್ತಿವೆ. ಹೀಗಾಗಿ ಕನ್ನಡ ಮಾಧ್ಯಮ ಶಾಲೆಗಳ ಅಭಿವೃದ್ಧಿ ಮತ್ತು ಸಂರಕ್ಷಣೆಗೆ ವಿಶೇಷ ಯೋಜನೆ ರೂಪಿಸಿ ಅಗತ್ಯ ಅನುದಾನ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು” ಎಂದು ಒತ್ತಾಯಿಸಿದರು.
ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ, ಕಟ್ಟಡಗಳ ಅಭಿವೃದ್ಧಿ, ಪಠ್ಯಪುಸ್ತಕಗಳ ಪೂರೈಕೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಬೇಕು. ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಈ ಶಾಲೆಗಳನ್ನು ಬಲಪಡಿಸುವುದು ಅತ್ಯಗತ್ಯವಾಗಿದ್ದು, ತೆಲಂಗಾಣದಲ್ಲಿರುವ ಕನ್ನಡಿಗರ ಮಕ್ಕಳಿಗೆ ತಮ್ಮ ಮಾತೃಭಾಷೆಯಲ್ಲಿ ಶಿಕ್ಷಣ ದೊರೆಯುವಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ : ಬೀದರ್ ನಗರದ ರಸ್ತೆ, ಬೀದಿ ಹಾಗೂ ವೃತ್ತಗಳಿಗೆ ಶರಣ-ಸೂಫಿ-ಸಂತರ ಹೆಸರಿಡಿ
ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ, ತೆಲಂಗಾಣದ ರಾಮಲಿಂಗಪ್ಪ ಹಾಗೂ ಧರ್ಮೇಂದ್ರ ಪೂಜಾರಿ, ಆಂಧ್ರಪ್ರದೇಶದ ಗಿರಿಜಾಪತಿ ಹಾಗೂ ತಿಪ್ಪೇಸ್ವಾಮಿ, ಗೋವಾದ ಶಿವಾನಂದ ಬಿಂಗಿ, ಕಾಸರಗೋಡು ಭಾಗದ ಪ್ರತಿನಿಧಿಗಳು ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಪ್ರಮುಖರು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.





