ಕನ್ನಡ ಶಕ್ತಿ ಕೇಂದ್ರ ಕೊಡಮಾಡುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‍ದಾಸ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ 25 ಸಾವಿರ ರೂ. ನಗದು, ಕಂಚಿನ ಪದಕ, ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ.
ಜೂನ್ 10ರಂದು ಸಂಜೆ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ನಾಗಮೋಹನ್‍ದಾಸ್ ಅವರಿಗೆ ನ್ಯಾಯಮೂರ್ತಿ ಡಾ.ಶಿವರಾಜ್ ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ಬೆಂಗಳೂರು ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ.ರಾಜಪ್ಪ ದಳವಾಯಿ ಅಧ್ಯಕ್ಷತೆ ವಹಿಸಲಿರುವ ಸಮಾರಂಭದಲ್ಲಿ ಕಸಾಪ ನಿಕಟ ಪೂರ್ವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ ತಿಳಿಸಿದ್ದಾರೆ.
