ಭಟ್ಕಳ: ಇಲ್ಲಿನ ಮುರಿನಕಟ್ಟೆ ಧ್ವಂಸ ಪ್ರಕರಣದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೇ 27ರ ವರೆಗೂ ನಿಷೇಧಾಜ್ಞೆ ಜಾರಿಯಲ್ಲಿದೆ. ನಗರದಲ್ಲಿ ಪ್ರಸ್ತುತ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣ ಇರುವುದರಿಂದ, ಮುಂಬರುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಯಾವುದೇ ಕಾನೂನು ಸುವ್ಯವಸ್ಥೆಗೆ ಸಮಸ್ಯೆ ಎದುರಾಗಬಾರದು ಎಂಬ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯ ಮಹತ್ವದ ತೀರ್ಮಾನ ಕೈಗೊಂಡಿದೆ.
ಹಬ್ಬದ ಆಚರಣೆಯ ವೇಳೆ ಶಾಂತಿ ಕಾಪಾಡುವ ಉದ್ದೇಶದಿಂದ ಈ ಬಾರಿ ಸಾರ್ವಜನಿಕವಾಗಿ ಈದ್ಗಾ ಮೈದಾನದಲ್ಲಿ ನಮಾಜ್ ಮಾಡುವ ಬದಲು, ನಗರದ ವಿವಿಧ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಲಾಗಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಭಟ್ಕಳದ ಈದ್ಗಾ ಮೈದಾನದಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಂದಿ ಏಕಕಾಲದಲ್ಲಿ ಸೇರಿ ಸಾರ್ವಜನಿಕವಾಗಿ ನಮಾಜ್ ಮಾಡುತ್ತಿದ್ದರು.
ಈ ಸುದ್ದಿ ಓದಿದ್ದೀರಾ? ಭಟ್ಕಳ | ಮುರಿನ ಕಟ್ಟೆ ಧ್ವಂಸ ಪ್ರಕರಣ; ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ, ನಗರದಲ್ಲಿ ನಿಷೇಧಾಜ್ಞೆ ಜಾರಿ
ಈ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾಗಿ ರಾಷ್ಟ್ರೀಯ ಹೆದ್ದಾರಿಯವರೆಗೂ ಸಾರ್ವಜನಿಕರು ಸಾಲಾಗಿ ನಿಲ್ಲುತ್ತಿದ್ದರು. ಆದರೆ, ಇತ್ತೀಚಿನ ಗಲಭೆಯ ಹಿನ್ನೆಲೆಯಲ್ಲಿ ಉದ್ವಿಗ್ನತೆ ತಡೆಯಲು ಈ ಬಾರಿ ಸೀಮಿತ ಸ್ಥಳಗಳಲ್ಲಿ ಮಾತ್ರ ಪ್ರಾರ್ಥನೆಗೆ ಅವಕಾಶ ಕಲ್ಪಿಸಲಾಗಿದೆ.
ನಗರದ ಪ್ರಮುಖ ಹತ್ತು ದೊಡ್ಡ ಮಸೀದಿಗಳಲ್ಲಿ ನಮಾಜ್ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಹಬ್ಬದ ಪ್ರಯುಕ್ತ ಯಾವುದೇ ರೀತಿಯ ರ‍್ಯಾಲಿ ಅಥವಾ ಮೆರವಣಿಗೆಗಳನ್ನು ನಡೆಸದಿರಲು ಸಹ ಸಮುದಾಯದ ಮುಖಂಡರು ಒಮ್ಮತದ ತೀರ್ಮಾನಕ್ಕೆ ಬಂದಿದ್ದಾರೆ.
ಎರಡು ದಿನ ಮದ್ಯ ಮಾರಾಟ ಬಂದ್: ಮತ್ತೊಂದೆಡೆ ಭಟ್ಕಳ ನಗರದಲ್ಲಿ ಸಂಪೂರ್ಣ ಶಾಂತಿ ಹಾಗೂ ಸಾರ್ವಜನಿಕ ಹಿತರಕ್ಷಣೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 28ರ ಬೆಳಗ್ಗೆ 5 ಗಂಟೆಯಿಂದ ಮೇ 29ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟ ಮತ್ತು ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ವ್ಯಾಪ್ತಿಯ ಎಲ್ಲಾ ಮದ್ಯದ ಅಂಗಡಿಗಳನ್ನು ಕಡ್ಡಾಯವಾಗಿ ಬಂದ್ ಮಾಡುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.




