ಭಟ್ಕಳ: ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ತಾಲೂಕಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಭಟ್ಕಳದಾದ್ಯಂತ ಮದ್ಯ ಮಾರಾಟ ಹಾಗೂ ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಮೊದಲ ಹಂತದಲ್ಲಿ, ಭಟ್ಕಳ ಶಹರ ಹಾಗೂ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ದಿನಾಂಕ 25-05-2026ರ ಬೆಳಿಗ್ಗೆ 6:00 ಗಂಟೆಯಿಂದ ದಿನಾಂಕ 27-05-2026ರ ಬೆಳಿಗ್ಗೆ 6:00 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯದ ಅಂಗಡಿ ಮತ್ತು ಬಾರ್‌ಗಳನ್ನು ಕಡ್ಡಾಯವಾಗಿ ಬಂದ್ ಮಾಡಲು ಸೂಚಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಭಟ್ಕಳ | ಮುರಿನ ಕಟ್ಟೆ ಧ್ವಂಸ ಪ್ರಕರಣ; ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ, ನಗರದಲ್ಲಿ ನಿಷೇಧಾಜ್ಞೆ ಜಾರಿ
ಇದರ ಮುಂದುವರಿದ ಭಾಗವಾಗಿ ಹಾಗೂ ಬಕ್ರೀದ್ ಹಬ್ಬದ ಆಚರಣೆಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಮೇ 28ರ ಬೆಳಿಗ್ಗೆ 5:00 ಗಂಟೆಯಿಂದ ಮೇ 29ರ ಮಧ್ಯರಾತ್ರಿ 12:00 ಗಂಟೆಯವರೆಗೆ ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ಮದ್ಯ ಮಾರಾಟ ಮತ್ತು ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಜಿಲ್ಲಾಧಿಕಾರಿಗಳ ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಸಲಾಗಿದೆ.




