ಕಾರಂಜಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿರುಸೇತುವೆ ದಾಟುವಾಗ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಚೆಕ್‌ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ವಿತರಿಸಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಸೋಮವಾರ ಸುರಿದ ಧಾರಾಕಾರ ಮಳೆಯಿಂದ ಕಾರಂಜಾ ನದಿಗೆ ಹೆಚ್ಚಿನ ನೀರು ಹರಿದು ಬಂದಿತ್ತು. ಈ ವೇಳೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಜಲಸಂಗಿ ಗ್ರಾಮದ ತುಕಾರಾಮ ಲಕ್ಷ್ಮಣ (40), ಘಾಟಬೋರಾಳದ ತಿಪ್ಪಣ್ಣ ವಿಶ್ವನಾಥ್ (33) ಎಂಬುವವರು ಸೇತುವೆ ದಾಟುವಾಗ ನೀರಿನಲ್ಲಿ ಕೊಚ್ಚಿಹೋಗಿ ಮೃತಪಟ್ಟಿದ್ದರು.
ಭಾಲ್ಕಿ ತಾಲೂಕಿನ ಕುಂಟೆಸಿರ್ಸಿ – ಮರೂರ ಗ್ರಾಮ ಮಧ್ಯೆ ಕಾರಂಜಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿರು ಸೇತುವೆ ಮೇಲೆ ದ್ವಿಚಕ್ರದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಇಬ್ಬರೂ ಕೊಚ್ಚಿಹೋಗಿ ಮೃತಪಟ್ಟಿದ್ದ ಘಟನೆ ನಡೆದಿತ್ತು. ಈ ಬಗ್ಗೆ ಭಾಲ್ಕಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ವಿದ್ಯುತ್ ದರ ಏರಿಕೆ ವಿರೋಧಿಸಿ ಕೆಪಿಆರ್‌ಎಸ್ ಪ್ರತಿಭಟನೆ
ಚೆಕ್ ವಿತರಣೆ ವೇಳೆ ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯ ಅರವಿಂದ್ ಕುಮಾರ್ ಅರಳಿ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಇದ್ದರು.