ಮಾ.7ರಂದು ಬೀದರ್‌ನ ಬಸವಕಲ್ಯಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
ಮಾ.7ರ ಬೆಳಗ್ಗೆ 11ಕ್ಕೆ ಥೇರಾ ಮೈದಾನದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದ್ದು, ರಾಜ್ಯದ ಪ್ರತಿಷ್ಠಿತ ಮಠಗಳ ನೂರಕ್ಕೂ ಹೆಚ್ಚು ಮಠಾಧೀಶರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳು, ಗಣ್ಯರು, ಸಾಹಿತಿಗಳು, ಚಿಂತಕರು ಭಾಗಿಯಾಗಲಿದ್ದಾರೆ ಎಂದರು.
12ನೇಯ ಶತಮಾನದಲ್ಲಿ ವಿಶ್ವಕ್ಕೆ ಸಮಾನತೆ ಸಂದೇಶ ಸಾರಿದ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿರುವುದು ಅಸಂಖ್ಯಾತ ಬಸವ ಅನುಯಾಯಿಗಳಿಗೆ ಸಂತಸ ತಂದಿದೆ.ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ನೇತೃತ್ವದಲ್ಲಿ ಮಠಾಧೀಶರು ಇದುವರೆಗೂ ರಾಜ್ಯದಲ್ಲಿ ಆಡಳಿತ ನಡೆಸಿದ ಸರಕಾರಗಳನ್ನು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡುವಂತೆ ಮನವಿ ಮಾಡಿದ್ದರು. ಆದರೆ, ಭರವಸೆ ಸಿಕ್ಕಿತೆ ಹೊರತು ಕಾರ್ಯರೂಪಕ್ಕೆ ಬರಲಿಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ಕಳೆದ ಡಿ.2ರಂದು ಭಾಲ್ಕಿ ಪಟ್ಟಣದಲ್ಲಿ ನಡೆದ ಡಾ.ಭೀಮಣ್ಣ ಖಂಡ್ರೆ ಅವರ ಶತಮಾನೋತ್ಸವ ಸಮಾರಂಭದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರ ನೇತೃತ್ವದಲ್ಲಿ ಸಹಿ ಅಭಿಯಾನ ನಡೆಸಿ ಎಲ್ಲ ಮಠಾಧೀಶರ ಸಹಿ ಹಾಕಿಸಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕವೆಂದು ಘೋಷಣೆ ಮಾಡುವಂತೆ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನದಲ್ಲಿಯು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡುವಂತೆ ನಿರ್ಣಯ ಕೈಗೊಳ್ಳಲಾಗಿತ್ತು. ಕಳೆದ ಜ.8ರಂದು ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ನೇತೃತ್ವದಲ್ಲಿ ನಾನು ಸೇರಿದಂತೆ ಹಲವರು ಮತ್ತೊಮ್ಮೆ ನಿಯೋಗ ಕೊಂಡೊಯ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಲಾಗಿತ್ತು ಎಂದರು.
ನಂತರದ ಕೆಲ ದಿನಗಳಲ್ಲೇ ಬಸವಣ್ಣನವರ ತತ್ವದ ಮೇಲೆ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿದ್ದು ಬಸವಾಭಿಮಾನಿಗಳು ಸೇರಿ ಎಲ್ಲ ಸಮುದಾಯದ ಜನರಿಗೆ ಹರ್ಷ ತರಿಸಿದೆ. ಒಳ್ಳೆಯ ಕೆಲಸ ಮಾಡಿದವರನ್ನು ಗೌರವಿಸುವುದು ನಮ್ಮ ಕರ್ತವ್ಯ ಈ ಹಿನ್ನೆಲೆಯಲ್ಲಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದಲ್ಲಿ ಬೃಹತ್ ಪ್ರಮಾಣದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಿ ಸತ್ಕರಿಸಲಾಗುತ್ತಿದೆ. ಜಿಲ್ಲೆಯ ಬಸವ ಭಕ್ತರು, ಎಲ್ಲ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಭಿನಂದನಾ ಸಮಾರಂಭ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ನ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಮಠಾಧೀಶರ ಮನವಿಗೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿ ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿರುವುದು ಐತಿಹಾಸಿಕ ತೀರ್ಮಾನ. ಜತೆಗೆ ಬಸವಕಲ್ಯಾಣದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಿ ಸಿಎಂ ಸಿದ್ದರಾಮಯ್ಯ ಅವರನ್ನು ಅಭಿನಂದಿಸಲಾಗುತ್ತಿದೆ. ಇದಕ್ಕೂ ಮುನ್ನ ಅಂದು ಅನುಭವ ಮಂಟಪದಲ್ಲಿ ದಾಸೋಹ ಭವನ ಲೋಕಾರ್ಪಣೆ ಮಾಡಿ, ಅನುಭವ ಮಂಟಪ ಕಾಮಗಾರಿ ವೀಕ್ಷಣೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಇದ್ದರು.
