ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಗಳು ದ್ವಿಚಕ್ರ/ನಾಲ್ಕು ಚಕ್ರ ವಾಹನಗಳಲ್ಲಿ ತೆರಳುವಾಗ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ದ್ವಿಚಕ್ರ ವಾಹನ ಬಳಸುವವರು ಹೆಲ್ಮೆಟ್ ಧರಿಸಬೇಕು. ನಾಲ್ಕು ಚಕ್ರದ ವಾಹನದಲ್ಲಿ ತೆರಳುವವರು ಸೀಟ್‌ಬೆಲ್ಟ್ ಹಾಕಿಕೊಳ್ಳಬೇಕು ಎಂದು ಬೀದರ್ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆದೇಶಿಸಿದ್ದಾರೆ.
ಸಂಚಾರಿ ನಿಯಮಗಳ ಪಾಲನೆ ಬಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಅವರು ಸುತ್ತೋಲೆ ಹೊರಡಿಸಿದ್ದಾರೆ. “ದೇಶವು ರಸ್ತೆ ಅಪಘಾತದಲ್ಲಿ ಮೊದಲನೇ ಸ್ಥಾನದಲ್ಲಿದೆ. ದೇಶದಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಬೀದರ್ ಜಿಲ್ಲೆಯಲ್ಲಿ 2022ರಲ್ಲಿ 332 ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ. 2023ರ ಜುಲೈ ಅಂತ್ಯದವರೆಗೆ 197 ಮಂದಿ ಮೃತಪಟ್ಟಿದ್ದಾರೆ. ಅವರಲ್ಲಿ ಎರಡು ವರ್ಷಗಳಲ್ಲಿ 26 ಮಂದಿ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಸ್ಥರು ಸಾವಿಗೀಡಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.
“ಅಪಘಾತ ಸಂಭವಿಸಲು ಸಂಚಾರ ಮತ್ತು ರಸ್ತೆ ಸುರಕ್ಷತಾ ನಿಯಮಗಳು ಪಾಲನೆ ಮಾಡದೇ ಇರುವುದು ಮುಖ್ಯ ಕಾರಣವಾಗಿದೆ. ದ್ವಿಚಕ್ರ ವಾಹನ ಸವಾರರು ಹೆಲೈಟ್ ಹಾಗೂ ನಾಲ್ಕು ಚಕ್ರ ವಾಹನ ಸವಾರರು ಸೀಟ್ ಬೆಲ್ಟ್ ಧರಿಸದೇ ವಾಹನ ಚಲಾಯಿಸುವುದರಿಂದ ಅಪಘಾತ ಸಂಭವಿಸಿದಾಗ ಹೆಚ್ಚು ಪೆಟ್ಟುಗಳಾಗಿ ಸಾವುಗಳ ಸಂಖ್ಯೆ ಹೆಚ್ಚಿತ್ತಿದೆ. ಹೀಗಾಗಿ, ಎಲ್ಲ ಸರ್ಕಾರಿ ನೌಕರರು ಹೆಲೈಟ್ ಧರಿಸದೇ ಇರುವುದರಿಂದ ಅಪಘಾತದಲ್ಲಿ ತಲೆಗೆ ಪೆಟ್ಟಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಹೀಗಾಗಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ದೃಷ್ಠಿಯಿಂದ ಎಲ್ಲ ಸರ್ಕಾರಿ ನೌಕರರು ಕಡ್ಡಾಯವಾಗಿ ಹೆಲ್ಮೆಟ್, ಸೀಟ್‌ಬೆಲ್ಟ್ ಧರಿಸಬೇಕು” ಎಂದು ಆದೇಶಿಸಿದ್ದಾರೆ.