‘ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್, ದ್ವೇಷ ಭಾಷಣ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಪೊಲೀಸರು ಎಚ್ಚರಿಕೆ ನೀಡಿದರು.
ಜೂನ್ 7ರ ಬಕ್ರೀದ್ ಹಬ್ಬದ ಅಂಗವಾಗಿ ನಗರದ ಜಿಲ್ಲಾ ಪೊಲೀಸ್ ಭವನದಲ್ಲಿ ಮಂಗಳವಾರ ಹಿಂದೂ-ಮುಸ್ಲಿಂ ಮುಖಂಡರ ಸೌಹಾರ್ದ ಸಭೆ ನಡೆಯಿತು.
‘ಹಿಂದೂ-ಮುಸ್ಲಿಂ ಬಾಂಧವರು ಒಗಟ್ಟಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬವನ್ನು ಆಚರಿಸಬೇಕು’ ಎಂದು ತಿಳಿಸಿದರು.

‘ಗೋವುಗಳ ಹತ್ಯೆ ಅಕ್ರಮ ಸಾಗಾಟವನ್ನು ನಿಷೇಧಿಸಲಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘಿಸಿದರೆ, ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಅಂಶಗಳು ಪೋಸ್ಟ್, ವಿಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.
ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಡಿವೈಎಸ್ಪಿಗಳಾದ ಶಿವನಗೌಡ ಪಾಟೀಲ್, ಶಿವಾನಂದ ಪವಾಡಶೆಟ್ಟಿ, ಜೆ.ಎಸ್. ನ್ಯಾಮೇಗೌಡ ಸೇರಿದಂತೆ ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಹಾಜರಿದ್ದರು.