ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳು ಮಕ್ಕಳಾ ರಕ್ಷಣಾ ಸೇವೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ, ಬೇಟಿ ಬಚಾವೋ, ಬೇಟಿ ಪಡಾವೋ, ಪೋಕ್ಸೋ, ಬಾಲ್ಯವಿವಾಹ ನಾಪತ್ತೆ ಸೇರಿದಂತೆ ಇತರೆ ಪ್ರಕರಣಗಳ ಬಗ್ಗೆ ಹೆಚ್ಚಿನ ಗಮಹರಿಸಿ ಕೆಲಸ ನಿರ್ವಹಿಸಬೇಕು’ ಎಂದರು.
‘ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಕಡ್ಡಾಯವಾಗಿ ಮನೆ-ಮನೆಗೆ ತೆರಳಿ ಮೊದಲ ಪ್ರಸವ ಗರ್ಭಿಣಿ, ಬಾಣಂತಿ ಫಲಾನುಭವಿಗಳ ನೋಂದಣಿ ಮಾಡಿಕೊಂಡು ಅವರಿಗೆ ತಾಯಿ ಕಾರ್ಡ್ ವಿತರಿಸಿ ಅವರಿಗೆ ಸಿಗಬೇಕಾದ ಸೌಲಭ್ಯಗಳು ಸಿಗುವಂತೆ ನೋಡಿಕೊಳ್ಳಬೇಕು’ ಎಂದರು.
‘ಸ್ವಚ್ಚತಾ, ಗೃಹ ಯೋಜನೆಯಡಿ ಕಷ್ಟಕರ ಪರಿಸ್ಥಿತಿಯಲ್ಲಿರುವ ಮಹಿಳೆಯರಿಗೆ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಮಹಿಳೆಯರಿಗೆ ಆಶ್ರಯ, ಆಹಾರ, ಬಟ್ಟೆ, ತರಬೇತಿ ಸೇರಿದಂತೆ ಶಿಕ್ಷಣ ನೀಡುವುದರ ಮೂಲಕ ಆರ್ಥಿಕವಾಗಿ, ಸಾಮಾಜಿಕವಾಗಿ ಸಶಕ್ತರಾಗುವಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.
‘ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ತೂಕ, ಎತ್ತರ ಹಾಗೂ ಎಡಗೈ ತೋಳ ಅಳತೆಯ ಮಾಪನ ಮಾಡಿ ಅಪೌಷ್ಠಿಕ ಮಕ್ಕಳ ಪಟ್ಟಿಯನ್ನು ಸಿದ್ಧಪಡಿಸಿ ಆ ಮಕ್ಕಳ ಮೇಲೆ ಹೆಚ್ಚಿನ ನಿಗಾವಹಿಸಬೇಕು. ಪೋಷಣ ಅಭಿಯಾನ ಯೋಜನೆಯ 0 ದಿಂದ 6 ವರ್ಷವರೆಗಿನ ಮಕ್ಕಳು, ಕಿಶೋರಿಯರು, ಗರ್ಭಿಣಿ ಮತ್ತು ಬಾಣಂತಿಯರ ಪೌಷ್ಟಿಕತೆ ಸುಧಾರಿಸಬೇಕು’ ಎಂದರು.
ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಟ್ಟದ ರಕ್ಷಣಾ ಘಟಕದಿಂದ ನಡೆಯುವ ವಿವಿಧ ಯೋಜನೆಗಳಾದ ಮಿಷನ್ ಶಕ್ತಿ ಯೋಜನೆ, ಒನ್ ಸ್ಟಾಪ್ ನಂಬರ್ ಯೋಜನೆ, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಟ, ಬಾಲ್ಯ ವಿವಾಹ ಇನ್ನಿತರ ಯೋಜನೆಗಳ ಕುರಿತು ಸಭೆಗೆ ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಆಶಾ ರಾಠೋಡ್‌ಗೆ ಬಂಜಾರ ಅಕಾಡೆಮಿ ವಾರ್ಷಿಕ ಪ್ರಶಸ್ತಿ
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ಅಧಿಕಾರಿ ಕಿಶೋರ ದುಬೆ, ಯೋಜನಾ ನಿರ್ದೇಶಕ ಜಗನ್ನಾಥ ಮೂರ್ತಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಜಿಯಾ ಬಳಬಟ್ಟಿ, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್.ಶ್ರೀಧರ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಗುರುರಾಜ, ತಾಲ್ಲೂಕ ಮಟ್ಟದ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು, ಸಂಘ-ಸಂಸ್ಥೆ ಪದಾಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಸೇರಿದಂತೆ ಇತರೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.