ಬೀದರ್ ನಗರದ ಅಕ್ಕಮಹಾದೇವಿ ಪದವಿ ಮಹಿಳಾ ಮಹಾವಿದ್ಯಾಲಯದ ತೃತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.
ಕಾಲೇಜು ಪ್ರಾಚಾರ್ಯೆ ಡಾ.ರಂಜನಾ ಪಾಟೀಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಸಕಾರಾತ್ಮಕವಾಗಿ ಯೋಚಿಸುವ ವ್ಯಕ್ತಿ ಮಾತ್ರ ಬದುಕಿನಲ್ಲಿ ನೆಮ್ಮದಿಯಿಂದ ಇರುತ್ತಾನೆ. ನಮ್ಮಲ್ಲಿರುವ ಜ್ಞಾನಬಲ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಯಶಸ್ಸಿಗೆ ಪ್ರಯತ್ನಿಸಬೇಕುʼ ಎಂದರು.
ʼಭಾರತೀಯ ಸಂಸ್ಕೃತಿಯಲ್ಲಿ ಅತಿಥಿಗಳಿಗೆ ಸ್ವಾಗತಿಸುವುದು ಹಾಗೂ ಬೀಳ್ಕೊಡುವ ಪದ್ಧತಿ ಇದೆ. ಅದರಂತೆ ಪ್ರಥಮ ವರ್ಷಕ್ಕೆ ಬಂದ ವಿದ್ಯಾರ್ಥಿನಿಯರಿಗೆ ಹಿರಿಯ ವಿದ್ಯಾರ್ಥಿಗಳು ಆತ್ಮೀಯವಾಗಿ ಸ್ವಾಗತಿಸುವ ಕಾರ್ಯ ಶ್ಲಾಘನೀಯ. ವಿದ್ಯಾರ್ಥಿಗಳು ಸತತ ಅಧ್ಯಯನದಲ್ಲಿ ತೊಡಗಿಸಿಕೊಂಡು ಸಾರ್ಥಕ ಬದುಕು ರೂಪಿಸಿಕೊಳ್ಳಿʼ ಎಂದು ಸಲಹೆ ನೀಡಿದರು.
ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಗಂಗಾಬಿಕೆ ಪಾಟೀಲ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಇಂದಿನ ಯುವಜನತೆ ಪುಸ್ತಕಕ್ಕೆ ಸೀಮಿತವಾಗದೆ, ಸಮಾಜದಲ್ಲಿನ ಓರೆಕೋರೆಗಳನ್ನು ಅರಿತುಕೊಳ್ಳಲು ಪ್ರಯತ್ನಿಸಬೇಕು. ಸಮಾಜದಲ್ಲಿ ಬರುವ ನಕರಾತ್ಮಕ ಯೋಚನೆಗಳಿಗೆ ಆದ್ಯತೆ ನೀಡದೆ ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕುʼ ಎಂದರು.

ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಡಾ.ಶಶಿಕಾಂತ ಅವರು ಮಾತನಾಡಿ, ʼಆಧುನಿಕ ತಂತ್ರಜ್ಞಾನ ಯುಗದಲ್ಲಿ ಎಲ್ಲ ಕ್ಷೇತ್ರದಲ್ಲಿ ಹೆಚ್ಚು ಸ್ಪರ್ಧೆ ಇದೆ. ವಿದ್ಯಾರ್ಥಿಗಳು ಕಾಲೇಜಿನಲ್ಲಿರುವ ಗ್ರಂಥಾಲಯ ಪುಸ್ತಕ, ಕಂಪ್ಯೂಟರ್‌ಗಳ ಸದ್ಬಳಕೆ ಮಾಡಿಕೊಂಡು ಹೆಚ್ಚಿನ ಜ್ಞಾನ ಸಂಪಾದಿಸಬೇಕು. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕುʼ ಎಂದು ತಿಳಿಸಿದರು.
ಇದನ್ನೂ ಓದಿ : ಕಲ್ಯಾಣ ಕರ್ನಾಟಕದಲ್ಲಿ 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ!
ಕಾರ್ಯಕ್ರಮದಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ.ದೇವರಾಜ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಹಾಗೂ ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.