ಬೀದರ ಜಿಲ್ಲೆಯಲ್ಲಿ ದಲಿತ ಸಮುದಾಯದವರ ಮೇಲೆ ನಿರಂತರವಾಗಿ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಕುರಿತು ಸಮಗ್ರವಾಗಿ ಸಿಐಡಿ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಭಾಲ್ಕಿ ತಾಲೂಕಿನಲ್ಲಿ ದಲಿತರ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ದೌರ್ಜನ್ಯ ನಡೆಯುತ್ತಿದೆ ಎಂದು ಸಂಘಟನೆ ಆರೋಪಿಸಿದೆ. ಅವಮಾನ, ಅಪಮಾನ ಹಾಗೂ ದೌರ್ಜನ್ಯಗಳನ್ನು ಸಹಿಸಿಕೊಂಡೇ ದಲಿತರು ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆ.13ರಂದು ಭಾಲ್ಕಿ ತಾಲೂಕಿನ ಮೆಹೆಕರ್ ಪೊಲೀಸ್ ಠಾಣೆ ವ್ಯಾಪ್ತಿಯ ಜೀರಗ್ಯಾಳ ಗ್ರಾಮದ ನಿವಾಸಿ ರಾಜಕುಮಾರ ವಿಠಲರಾವ ಸಿಂಧೆ ಅವರು ಆಡು-ಕುರಿಗಳನ್ನು ಮೇಯಿಸಲು ತೆರಳಿದ್ದ ಸಂದರ್ಭದಲ್ಲಿ ಜಾತಿ ನಿಂದನೆ ಮಾಡಿ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ವಿರುದ್ಧ ಮೆಹೆಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸಂಘಟನೆ ತಿಳಿಸಿದೆ.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಬೀದರ ಜಿಲ್ಲಾದ್ಯಂತ ದಲಿತರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಪ್ರಕರಣಗಳ ಹಿಂದಿರುವ ಕಾರಣಗಳು ಹಾಗೂ ದೌರ್ಜನ್ಯಗಳ ನಿರಂತರತೆಗೆ ಕಡಿವಾಣ ಹಾಕಲು ಸಿಐಡಿ ತನಿಖೆಯ ಅಗತ್ಯವಿದೆ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ : ಬೀದರ್ | ಹೊಲದಲ್ಲಿ ಮೇಕೆ ಮೇಯಿಸಿದಕ್ಕೆ ದಲಿತ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ; ಸಾವು
ಈ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಮಾಡಿರುವ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಮಿತಿ, ಜಿಲ್ಲೆಯಲ್ಲಿ ದಲಿತರ ಸುರಕ್ಷತೆ ಖಚಿತಪಡಿಸುವಂತೆ ಹಾಗೂ ದೌರ್ಜನ್ಯ ಪ್ರಕರಣಗಳ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಸಂಘಟನೆ ಸಂಚಾಲಕ ಮಾರುತಿ ಬೌದ್ಧೆ, ಜಿಲ್ಲಾ ಸಂಚಾಲಕ ಅರುಣ ಪಟೇಲ್, ಜಿಲ್ಲಾ ಸಂಘಟನಾ ಸಂಚಾಲಕ ರಾಜಕುಮಾರ ವಾಘಮಾರೆ ಅವರು ಒತ್ತಾಯಿಸಿದ್ದಾರೆ.




