ರಾಜ್ಯ ಸರ್ಕಾರದ ಆದೇಶದಂತೆ ಔರಾದ್ ಪಟ್ಟಣ ಸೇರಿದಂತೆ ತಾಲೂಕು ವ್ಯಾಪ್ತಿಯ ಅಂಗಡಿ ಮುಂಗಟ್ಟುಗಳು, ಶಾಲಾ-ಕಾಲೇಜುಗಳು, ಆಸ್ಪತ್ರೆಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಜಾಹೀರಾತು ಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಕ್ರಮ ಕೈಗೊಳ್ಳಬೇಕೆಂದಯ ನಮ್ಮ ಕರ್ನಾಟಕ ಸೇನೆ ತಾಲ್ಲೂಕು ಘಟಕ ಆಗ್ರಹಿಸಿದೆ.
ಈ ಸಂಬಂಧ ಸೇನೆಯ ಪ್ರಮುಖರು ತಾಲ್ಲೂಕು ತಹಸೀಲ್ದಾರ್ ಅವರ ಹೆಸರಿಗೆ ಬರೆದ ಮನವಿಯನ್ನು ತಾಲ್ಲೂಕಾಡಳಿ ಅಧಿಕಾರಿಗೆ ಸಲ್ಲಿಸಿದರು.
ಕರ್ನಾಟಕ ರಾಜ್ಯ ಸರ್ಕಾರದ ಆದೇಶದ ಪ್ರಕಾರ ರಾಜ್ಯದ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಸಂಸ್ಥೆಗಳು, ಹೋಟೆಲ್‌ಗಳು, ಶಾಲಾ-ಕಾಲೇಜುಗಳು, ಆಸ್ಪತ್ರೆಗಳು ಹಾಗೂ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆಗೆ ಆದ್ಯತೆ ನೀಡುವುದು ಕಡ್ಡಾಯವಾಗಿದೆ. ಆದರೆ, ಔರಾದ್ ತಾಲೂಕು ವ್ಯಾಪ್ತಿಯ ಅನೇಕ ಸ್ಥಳಗಳಲ್ಲಿ ಈ ಆದೇಶವನ್ನು ಸಮರ್ಪಕವಾಗಿ ಪಾಲಿಸುತ್ತಿಲ್ಲ. ಇದರಿಂದ ಕನ್ನಡ ಭಾಷೆಯ ಬಳಕೆ ಮತ್ತು ಗೌರವಕ್ಕೆ ಧಕ್ಕೆಯಾಗುತ್ತಿದೆ ಎಂದು ಸೇನೆಯ ಪದಾಧಿಕಾರಿಗಳು ಮನವಿಯಲ್ಲಿ ತಿಳಿಸಿದ್ದಾರೆ.
ತಾಲೂಕು ವ್ಯಾಪ್ತಿಯ ಎಲ್ಲ ವಾಣಿಜ್ಯ ಸಂಸ್ಥೆಗಳು, ಅಂಗಡಿ ಮುಂಗಟ್ಟುಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಹಾಗೂ ಜಾಹೀರಾತು ಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆಯ ಬಳಕೆಯನ್ನು ಕಡ್ಡಾಯಗೊಳಿಸಬೇಕು. ಸರ್ಕಾರದ ಆದೇಶ ಪಾಲಿಸದ ಸಂಸ್ಥೆಗಳಿಗೆ ಸೂಕ್ತ ಸೂಚನೆ ನೀಡಿ, ನಿಯಮಾನುಸಾರ ಕ್ರಮ ಕೈಗೊಳ್ಳುವ ಮೂಲಕ ಕನ್ನಡ ಭಾಷೆಯ ಗೌರವ ಮತ್ತು ಬಳಕೆಯನ್ನು ಕಾಪಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆಯ ತಾಲ್ಲೂಕಾಧ್ಯಕ್ಷ ಬಾಲಾಜಿ ದಾಮಾ ಹಾಗೂ ಪ್ರದೀಪ ಗೋಖಲೆ, ಅಜಯ ವರ್ಮಾ, ಪ್ರಶಾಂತ್ ಸುಂದಾಳಕರ್, ರಜನಿಕಾಂತ್, ಅರುಣ ಮಡಿವಾಳ,ಪೀಟರ್ಸನ್ ಸೇರಿದಂತೆ ಸೇನೆಯ ಪದಾಧಿಕಾರಿಗಳು ಇದ್ದರು.
ಇದನ್ನೂ ಓದಿ : ಬೀದರ್ | ವಸತಿ ಶಾಲೆಗಳ ಪ್ರಾಂಶುಪಾಲರು, ಮೇಲ್ವಿಚಾರಕರ ವರ್ಗಾವಣೆಗೆ ಡಿವಿಪಿ ಆಗ್ರಹ




