ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಔರಾದ್ ತಾಲೂಕು ಪಂಚಾಯತ್, ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಸೋಮವಾರ ಸಂತಪೂರ ಗ್ರಾಮ ಪಂಚಾಯಿತಿ ಆವರಣದಲ್ಲಿ ಸಸಿ ನೆಡುವುದರ ಮೂಲಕ ಗೃಹಲಕ್ಷ್ಮಿ ದಿನ ಆಚರಿಸಲಾಯಿತು.
ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚನ್ನಪ್ಪ ಉಪ್ಪೆ ಮಾತನಾಡಿ, “ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆಸರೆಯಾಗಿದ್ದು, ಗೃಹಲಕ್ಷ್ಮೀ ಯೋಜನೆಯು ಮಹಿಳೆಯರ ಸ್ವಾವಲಂಬನೆಗೆ ಹೊಸ ದಿಕ್ಕು ತೋರಿಸಿದೆ. ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳು ಸಂಪೂರ್ಣವಾಗಿ ಪಡೆದುಕೊಳ್ಳುಬೇಕು” ಎಂದು ಅಭಿಪ್ರಾಯಪಟ್ಟರು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಮಾತನಾಡಿ, “ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿನಲ್ಲಿ ಮಹತ್ವದ ಬದಲಾವಣೆ ತಂದಿವೆ. ಗೃಹಲಕ್ಷ್ಮೀ ಯೋಜನೆಯಿಂದ ಲಕ್ಷಾಂತರ ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದು, ಕುಟುಂಬದ ನಿರ್ವಹಣೆಯಲ್ಲಿ ಆತ್ಮವಿಶ್ವಾಸದಿಂದ ಮುಂದೆ ಸಾಗುತ್ತಿದ್ದಾರೆ” ಎಂದು ಹೇಳಿದರು.
ಇದನ್ನೂ ಓದಿ : ಬೀದರ್ | ಸೋನಂ ವಾಂಗ್ಚೂಕ್ ಹೋರಾಟಕ್ಕೆ ಬೆಂಬಲ : ಪ್ರಧಾನಿ ಮೋದಿ, ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯ
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಸಂತಪೂರ ಗ್ರಾಮ ಪಂಚಾಯತ್ ಪಿಡಿಒ ಸಂತೋಷ ಪಾಟೀಲ್, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಶಿವಕುಮಾರ ಪಾಟೀಲ್, ಸಲ್ಲಾವುದ್ದಿನ್ ಜಂಬಗಿ ಹಾಗೂ ಸಿಡಿಪಿಒ, ಕೆಇಬಿ, ಆಹಾರ ಇಲಾಖೆ, ಯುವನಿಧಿ, ಸಾರಿಗೆ ಇಲಾಖೆಯ ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.





