ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆ ಸಮೀಪವಿರುವ ಶುದ್ಧ ಕುಡಿಯುವ ನೀರಿನ ಘಟಕ ಕಳೆದ 20 ದಿನಗಳಿಂದ ಕೆಟ್ಟುಹೋಗಿದ್ದು, ಕೂಡಲೇ ದುರಸ್ತಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಸರ್ಕಾರವು ಕೆಲ ವರ್ಷಗಳ ಹಿಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿತ್ತು. ಆದರೆ, ಸಮರ್ಪಕ ನಿರ್ವಹಣೆ ಇಲ್ಲದ ಕಾರಣ ಶೆಂಬೆಳ್ಳಿಯ ಘಟಕ ಇದೀಗ ಸ್ಥಗಿತಗೊಂಡಿದೆ.
ಗ್ರಾಮದಲ್ಲಿರುವ ನೀರಿನ ಟ್ಯಾಂಕ್‌ಗಳನ್ನು ಸಮರ್ಪಕವಾಗಿ ಸ್ವಚ್ಛಗೊಳಿಸದ ಕಾರಣ ಅವುಗಳಲ್ಲಿ ತ್ಯಾಜ್ಯ ಸಂಗ್ರಹವಾಗಿದೆ. ಹೀಗಾಗಿ ಅಲ್ಲಿನ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಬಹುತೇಕ ಗ್ರಾಮಸ್ಥರು ಶುದ್ಧ ನೀರಿನ ಘಟಕದ ನೀರನ್ನೇ ಕುಡಿಯಲು ಬಳಸುತ್ತಿದ್ದು, ಘಟಕ ಕೆಟ್ಟುಹೋದ ಹಿನ್ನೆಲೆಯಲ್ಲಿ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಎಂದು ಗ್ರಾಮಸ್ಥ ಸಂಗೊಂಡ ಮೇತ್ರೆ ದೂರಿದ್ದಾರೆ.
ಇದನ್ನೂ ಓದಿ : ಬೀದರ್ | ಬಿಎಸ್‌ಎಸ್‌ಕೆ ಶೀಘ್ರ ಪುನಶ್ಚೇತನಕ್ಕೆ ಜೈಕರವೇ ಆಗ್ರಹ
ಈ ಕುರಿತು ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಒಂದೆರಡು ದಿನಗಳೊಳಗೆ ಘಟಕವನ್ನು ದುರಸ್ತಿಪಡಿಸಿ ಜನರಿಗೆ ಶುದ್ಧ ಕುಡಿಯುವ ನೀರು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.




