ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೊಂಡಿರುವ ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣಾಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಹೇಳಿದರು.
ಔರಾದ್ ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ನಡೆಯುತ್ತಿರುವ ಸಿಸಿಟಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.
“ಯೋಜನೆಯಡಿ ದಿನಗೂಲಿ ಮೊತ್ತವನ್ನು ₹370ರಿಂದ ₹382ಕ್ಕೆ ಹೆಚ್ಚಿಸಲಾಗಿದೆ. ವಾರ್ಷಿಕ ಉದ್ಯೋಗಾವಕಾಶವನ್ನು 100 ದಿನಗಳಿಂದ 125 ದಿನಗಳಿಗೆ ವಿಸ್ತರಿಸಲಾಗಿದ್ದು, ಗ್ರಾಮೀಣ್ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ಹೊಂದಿರುವ ಕುಟುಂಬವು ವರ್ಷಕ್ಕೆ ₹47,750ರವರೆಗೆ ಆದಾಯ ಗಳಿಸಲು ಅವಕಾಶ ಕಲ್ಪಿಸಲಾಗಿದೆ” ಎಂದು ಮಾಹಿತಿ ನೀಡಿದರು.
ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಮಾತನಾಡಿ, “ವಿಬಿ ಜಿ ರಾಮ್ ಜಿ ಯೋಜನೆಯಡಿ 318 ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವಕಾಶವಿದ್ದು, ಪ್ರತಿಯೊಬ್ಬ ಅರ್ಹ ಕುಟುಂಬವೂ ಜಾಬ್ ಕಾರ್ಡ್ ಹೊಂದಿ ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸಿ ಯೋಜನೆಯ ಸಂಪೂರ್ಣ ಪ್ರಯೋಜನ ಪಡೆಯಬೇಕು” ಎಂದರು.
“ಗ್ರಾಮಗಳಲ್ಲಿ ಹೆಚ್ಚಿನ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳನ್ನು ಆರಂಭಿಸುವ ಮೂಲಕ ಉದ್ಯೋಗ ಸೃಷ್ಟಿ ಹೆಚ್ಚಿಸಿ, ಕುಟುಂಬಗಳ ಆರ್ಥಿಕ ಪ್ರಗತಿಗೂ ಒತ್ತು ನೀಡಬೇಕು” ಎಂದು ಹೇಳಿದರು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಂದಕಿಶೋರ ಶಾಸ್ತ್ರಿ, ತಾಂತ್ರಿಕ ಸಹಾಯಕ ಶರಣಪ್ಪ, ಡಿಇಒ ಪ್ರಕಾಶ, ಗ್ರಾಮ ಕಾಯಕ ಮಿತ್ರ ಜಗದೇವಿ, ಎಂಬಿಕೆ ಉಷಾ, ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್, ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಕೂಲಿಕಾರ್ಮಿಕರು ಉಪಸ್ಥಿತರಿದ್ದರು.




