ಔರಾದ್: ತಾಲ್ಲೂಕಿನ ಸಂತಪೂರ ಗ್ರಾಮದ ಅನುಭವ ಮಂಟಪ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಶಾಲೆಯ ಪ್ರಾಚಾರ್ಯೆ ಗುರುಪ್ರೀತ್ ಕೌರ್ ಮಾತನಾಡಿ, “ಮಕ್ಕಳಲ್ಲಿ ಅಪಾರವಾದ ಕೌಶಲ್ಯ ಮತ್ತು ಪ್ರತಿಭೆ ಅಡಗಿರುತ್ತವೆ. ಅವುಗಳನ್ನು ಗುರುತಿಸಿ, ಪ್ರೋತ್ಸಾಹಿಸಿ ಹೊರತರುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಆಸಕ್ತಿ ಬೆಳೆಸಿಕೊಂಡು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಶಿಕ್ಷಕರು ಪ್ರೇರೇಪಿಸಬೇಕು. ಮಕ್ಕಳು ಹೆಚ್ಚಿನ ಆಸಕ್ತಿಯಿಂದ ಅಧ್ಯಯನದಲ್ಲಿ ತೊಡಗಿಸಿಕೊಂಡು ಭವಿಷ್ಯದಲ್ಲಿ ದೇಶದ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು” ಎಂದು ಹೇಳಿದರು.

ಸಿದ್ಧರಾಮೇಶ್ವರ ಪಿಯು ಕಾಲೇಜಿನ ಪ್ರಾಚಾರ್ಯ ನವೀಲಕುಮಾರ ಉತ್ಕಾರ್ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಂತೆ ಪ್ರೇರೇಪಿಸಬೇಕು. ತಂದೆ-ತಾಯಿ ಹಾಗೂ ಶಿಕ್ಷಕರ ಮಾರ್ಗದರ್ಶನ ಮತ್ತು ಉಪದೇಶಗಳನ್ನು ಮಕ್ಕಳು ಪಾಲಿಸಬೇಕು. ನಿರಂತರ ಅಧ್ಯಯನದಿಂದ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ. ಶಿಕ್ಷಣದ ಜೊತೆಗೆ ಸಂಸ್ಕಾರಕ್ಕೂ ಶಿಕ್ಷಕರು ಹೆಚ್ಚಿನ ಒತ್ತು ನೀಡಬೇಕು” ಎಂದರು.
ಮಕ್ಕಳ ದಿನಾಚರಣೆ ಅಂಗವಾಗಿ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ 2027ನೇ ಸಾಲಿನ ಕ್ಯಾಲೆಂಡರ್‌ಗಳನ್ನು ವಿತರಿಸಲಾಯಿತು. ಕ್ಯಾಲೆಂಡರ್‌ನಲ್ಲಿ ಪ್ರತಿ ತರಗತಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಭಾವಚಿತ್ರಗಳನ್ನು ಅಳವಡಿಸಲಾಗಿತ್ತು. ಬಳಿಕ ವಿದ್ಯಾರ್ಥಿಗಳಿಂದ ಭಾಷಣ, ನೃತ್ಯ, ವಚನ ಗಾಯನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದಲ್ಲಿ ಅನುಭವ ಮಂಟಪ ಗುರುಕುಲ ಪ್ರೌಢಶಾಲೆಯ ಮುಖ್ಯಗುರು ಶಿವಕುಮಾರ ಹಿರೇಮಠ, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ದಾಕ್ಷಾಯಣಿ, ಲೆಕ್ಕಾಧಿಕಾರಿ ವಿಜಯಕುಮಾರ ಪಾಟೀಲ್ ಸೇರಿದಂತೆ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ : ʼಈದಿನʼ ವರದಿ ಫಲಶೃತಿ | ಬೀದರ್ ವಿವಿ: ಪಿಜಿ ತರಗತಿ ಪುನರಾರಂಭ ದಿನಾಂಕ ಮುಂದೂಡಿಕೆ



