ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಸೇವೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಗುರುವಾರ ಔರಾದ್ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಸಾರ್ವಜನಿಕರು ಹಾಗೂ ಕೂಲಿಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು.
ತಾಲೂಕಿನ ಧೂಪತಮಹಾಗಾಂವ, ಚಟ್ನಾಳ, ಸಂತಪೂರ ಹಾಗೂ ಹೆಡಗಾಪುರ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಜಲಜೀವನ ಮಿಷನ್ ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳು, ಗ್ರಾಮ ಗ್ರಂಥಾಲಯ, ಅಂಗನವಾಡಿ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ಆಸ್ಪತ್ರೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ಮತ್ತು ಮೂಲಸೌಕರ್ಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಗ್ರಾಮೀಣ ಜನರಿಗೆ ಅಗತ್ಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಧೂಪತಮಹಾಗಾಂವ ಗ್ರಾಮಕ್ಕೆ ಭೇಟಿ ನೀಡಿದ ಸಿಇಒ, ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ ಕುಡಿಯುವ ನೀರಿನ ಪೂರೈಕೆಯ ಕುರಿತು ಮಾಹಿತಿ ಪಡೆದರು. ಗ್ರಾಮದಲ್ಲಿ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ, ಸಾರ್ವಜನಿಕರಿಗೆ ನಿರಂತರವಾಗಿ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.

ಶೆಂಬೆಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಟ್ನಾಳ ಗ್ರಾಮದ ವಿವಿಧ ಬಡಾವಣೆಯಲ್ಲಿ ಸುತ್ತಾಡಿ ಕುಡಿಯುವ ನೀರಿನ ಟ್ಯಾಂಕರ್, ನಲ್ಲಿಗಳ ವ್ಯವಸ್ಥೆ ಪರಿಶೀಲಿಸಿದರು. ಬಳಿಕ ನೀರು ಸಂಗ್ರಹಣಾ ಟ್ಯಾಂಕ್ನ ಒಳಭಾಗದ ಸ್ವಚ್ಛತೆಯನ್ನು ವೀಕ್ಷಿಸಿ, ಟ್ಯಾಂಕ್ನ್ನು ನಿಯಮಿತವಾಗಿ ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ವಾಟರ್ ಮ್ಯಾನ್ ಹಾಗೂ ಪಿಡಿಒ ಅವರಿಗೆ ನಿರ್ದೇಶನ ನೀಡಿದರು.
ಕೂಲಿಕಾರ್ಮಿಕರೊಂದಿಗೆ ಸಂವಾದ
ವಿಬಿ-ಜಿ ರಾಮ್ ಜಿ ಯೋಜನೆಯಡಿ ಚಟ್ನಾಳ ಗ್ರಾಮದಲ್ಲಿ ನಡೆಯುತ್ತಿದ್ದ ಸಿಸಿಟಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಇಒ, ಕಾಮಗಾರಿ ಸ್ಥಳದಲ್ಲಿದ್ದ ಕೂಲಿಕಾರ್ಮಿಕರೊಂದಿಗೆ ಸಂವಾದ ನಡೆಸಿ, ಕೆಲಸದ ಪ್ರಗತಿ ಹಾಗೂ ಕಾರ್ಮಿಕರಿಗೆ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.
ಸಂತಪೂರ ಗ್ರಾಮದಲ್ಲಿ ನಡೆಯುತ್ತಿದ್ದ ತಿರುಗಾಲುವೆ ಕಾಮಗಾರಿಯನ್ನೂ ವೀಕ್ಷಿಸಿದ ಅವರು, ಕಾರ್ಮಿಕರಿಗೆ ನಿಯಮಿತವಾಗಿ ಕೆಲಸ ದೊರೆಯುತ್ತಿದೆಯೇ ಹಾಗೂ ಕೂಲಿ ಹಣ ಸಕಾಲಕ್ಕೆ ಪಾವತಿಯಾಗುತ್ತಿದೆಯೇ ಎಂಬುದರ ಕುರಿತು ವಿಚಾರಿಸಿದರು. ಗ್ರಾಮೀಣ ಕಾರ್ಮಿಕರಿಗೆ ಉದ್ಯೋಗಾವಕಾಶಗಳು ಮತ್ತು ಸರ್ಕಾರದ ಯೋಜನೆಗಳ ಸೌಲಭ್ಯಗಳು ಸಮರ್ಪಕವಾಗಿ ದೊರೆಯುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಹೆಡಗಾಪುರದಲ್ಲಿರುವ ಜಾನುವಾರು ತಳಿ ಸಂವರ್ಧನಾ ಮತ್ತು ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ, ಜಾನುವಾರು ಹಾಗೂ ಕೋಳಿ ಸಂವರ್ಧನಾ ಕೇಂದ್ರದ ಕಟ್ಟಡ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು. ನಂತರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಪಶು ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳು ಹಾಗೂ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಸೇವೆಗಳ ಕುರಿತು ಮಾಹಿತಿ ಪಡೆದರು.

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ಆರೋಗ್ಯ ಸೇವೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಕಾಮಗಾರಿಗಳ ಗುಣಮಟ್ಟ ಕಾಪಾಡುವುದರ ಜೊತೆಗೆ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳು ತಲುಪುವಂತೆ ನೋಡಿಕೊಳ್ಳಬೇಕೆಂದು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ಔರಾದ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಸೇರಿದಂತೆ ಡಾ.ಗೌತಮ್ ಅರಳಿ, ಎಇಇ ಮಾರುತಿ ರಾಠೋಡ, ಟಿಎಚ್ಒ ಡಾ.ಅನಿಲಕುಮಾರ ಎಕಲಾರೆ, ಎಡಿ ಉತ್ತಮ, ತುಕಾರಾಮ, ಪಿಡಿಒಗಳಾದ ಸಂತೋಷ ಪಾಟೀಲ್, ನಾಗೇಶ ಮುಕ್ರಂಬೆ, ಶರಣಪ್ಪ ಗಾದಗೆ, ನಂದಕುಮಾರ ಶಾಸ್ತ್ರೀ, ತಾಪಂ ಟಿಸಿ ಆನಂದ ಕಾಳಗಾಪೂರೆ, ಟಿಎ ಸಂದೀಪ್, ಶರಣಪ್ಪ, ಪರಮೇಶ್ವರ, ಟಿಐಇಸಿ ಅಂಬಾದಾಸ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬಸವಕಲ್ಯಾಣ | ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಬಸವತತ್ವವೇ ದಾರಿ: ಸಚಿವ ಈಶ್ವರ ಖಂಡ್ರೆ




