ಜವಾಹರ ನವೋದಯ ವಿದ್ಯಾಲಯದ 2027–28ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಯು ನವೆಂಬರ್ 28ರ ಶನಿವಾರ ಜಿಲ್ಲೆಯಾದ್ಯಂತ ನಡೆಯಲಿದೆ. ಪರೀಕ್ಷೆಗೆ ಜಿಲ್ಲೆಯಿಂದ ಒಟ್ಟು 4,567 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಪ್ರವೇಶ ಪತ್ರ ಹಾಗೂ ಆಧಾರ್ ಕಾರ್ಡ್‌ನ ಜೆರಾಕ್ಸ್ ಪ್ರತಿಯನ್ನು ತರಬೇಕು. ಜ್ಯಾಮಿಟ್ರಿ ಬಾಕ್ಸ್, ಎಲೆಕ್ಟ್ರಾನಿಕ್ ಸಾಧನಗಳು ಸೇರಿದಂತೆ ಇತರ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ತರಲು ಅನುಮತಿ ಇರುವುದಿಲ್ಲ. ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರದಲ್ಲಿ ನಮೂದಿಸಿರುವ ಪರೀಕ್ಷಾ ಕೇಂದ್ರಕ್ಕೆ ಬೆಳಿಗ್ಗೆ 10 ಗಂಟೆಯೊಳಗೆ ಹಾಜರಾಗಬೇಕು. ದಿವ್ಯಾಂಗ ವಿದ್ಯಾರ್ಥಿಗಳು ಸರ್ಕಾರದಿಂದ ನೀಡಲಾದ ಗುರುತಿನ ಚೀಟಿ ಅಥವಾ ಅದರ ಜೆರಾಕ್ಸ್ ಪ್ರತಿಯನ್ನು ತರಬೇಕು ಎಂದು ಸೂಚಿಸಲಾಗಿದೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಗಳ ಮುಖ್ಯೋಪಾಧ್ಯಾಯರು ತಮ್ಮ ಶಾಲೆಗಳಿಂದ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಸೂಕ್ತ ನಿರ್ದೇಶನ ನೀಡಬೇಕು. ಈ ಮೂಲಕ ಗೈರುಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಸಹಕರಿಸಬೇಕು ಎಂದು ನವೋದಯ ವಿದ್ಯಾಲಯದ ಪ್ರಾಚಾರ್ಯ ವಿ. ನಾಗರಾಜನ್ ಮನವಿ ಮಾಡಿದ್ದಾರೆ.

ಕೆಲವು ವಿದ್ಯಾರ್ಥಿಗಳು ಎರಡು ಅಥವಾ ಅದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಿರುವುದು ಗಮನಕ್ಕೆ ಬಂದಿದೆ. ಅಂತಹ ವಿದ್ಯಾರ್ಥಿಗಳು ಒಂದು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಂಡು, ಉಳಿದ ಕೇಂದ್ರಗಳಲ್ಲಿ ಪರೀಕ್ಷೆಗೆ ಗೈರುಹಾಜರಾಗುವ ಕುರಿತು ಪರೀಕ್ಷೆ ಆರಂಭಕ್ಕೂ ಮುನ್ನವೇ ಸಂಬಂಧಿಸಿದ ಕೇಂದ್ರ ಅಧೀಕ್ಷಕರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.
ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಅಧೀಕ್ಷಕರು ಹಾಗೂ ಕೇಂದ್ರ ಪರಿವೀಕ್ಷಕರಿಗೆ ನವೆಂಬರ್ 27ರಂದು ನಾರಾಯಣಪುರದ ಜವಾಹರ ನವೋದಯ ವಿದ್ಯಾಲಯದಲ್ಲಿ ಅಗತ್ಯ ಮಾರ್ಗದರ್ಶನ ನೀಡಲಾಗುವುದು ಎಂದು ಪರೀಕ್ಷಾ ಪ್ರಭಾರಿ ಧರ್ಮಣ್ಣ ಚಿಟ್ಟಾ ಹಾಗೂ ಪ್ರಾಚಾರ್ಯ ವಿ. ನಾಗರಾಜನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಬೀದರ್ | ನ.28, 29ರಂದು 47ನೇ ಶರಣ ಕಮ್ಮಟ, ಅನುಭವ ಮಂಟಪ ಉತ್ಸವ





