ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಹೇಳಿದರು.
ನಗರದ ಬಿಕೆಐಟಿ ಸಭಾಂಗಣದಲ್ಲಿ ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಎಸ್‌ಐಆರ್ ಕುರಿತು ಗುರುವಾರ ಆಯೋಜಿಸಿದ್ದ ಜನಜಾಗೃತಿ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಮತದಾರರನ್ನು ಪಟ್ಟಿಯಿಂದ ಕೈಬಿಡುವ ಹುನ್ನಾರವಾಗಿದೆ. ಅರ್ಹ ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ ಆಗದಂತೆ ಕೈ ಕಾರ್ಯತರು ಎಚ್ಚರಿಕೆ ವಹಿಸಬೇಕು” ಎಂದರು.
ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಿಎಲ್‌ಎ-2 ಪ್ರತಿನಿಧಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ, ಎಸ್‌ಐಆರ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಸಹಕರಿಸಬೇಕು. ಪ್ರಜಾಪ್ರಭುತ್ವದ ಭದ್ರ ಅಡಿಪಾಯವೇ ಮತದಾರರಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರ ಮತದಾನದ ಹಕ್ಕು ಸುರಕ್ಷಿತವಾಗಿರಲು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಂಘಟಿತವಾಗಿ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.
ಸಂಸದ ಸಾಗರ ಖಂಡ್ರೆ ಮಾತನಾಡಿ, “ಮತದಾರರ ಹಕ್ಕುಗಳ ರಕ್ಷಣೆಗೆ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಕಾರ್ಯಕರ್ತರು ಸಕ್ರಿಯವಾಗಿ
ತೊಡಗಿಸಿಕೊಳ್ಳಬೇಕು” ಎಂದು ತಿಳಿಸಿದರು.
ತಾಲೂಕು ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರು ಆಗಿರುವ ಹಣಮಂತರಾವ ಚವ್ಹಾಣ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದನ್ನೂ ಓದಿ : ಬೀದರ್ | ಕನ್ನಡ ನಾಡು-ನುಡಿಗೆ ಜಯದೇವಿತಾಯಿ ಲಿಗಾಡೆ ಸೇವೆ ಅನನ್ಯ : ಬಸವರಾಜ ಮಯೂರ
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ ಮಾಶೆಟ್ಟೆ, ಮಲ್ಲಿಕಾರ್ಜುನ ಪಾಟೀಲ್ ಮುಗನೂರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕರಾವ ಸೋನಜೀ, ಜಿಪಂ ಮಾಜಿ ಅಧ್ಯಕ್ಷ ಶಿವರಾಜ ಹಾಸನಕರ್, ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ವಂಕೆ, ಅಬ್ದುಲ್ ನಸೀರ್ ಸೇರಿದಂತೆ ಹಲವರು ಇದ್ದರು.




