ರಾಜ್ಯ ಸರ್ಕಾರದ ಆದೇಶದಂತೆ ಅಂಗಡಿ, ಮುಂಗಟ್ಟುಗಳು ಸೇರಿದಂತೆ ಎಲ್ಲ ವ್ಯಾಪಾರ ಸಂಸ್ಥೆಗಳು, ಹೋಟೆಲ್‌ಗಳು, ಆಸ್ಪತ್ರೆಗಳು, ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ.
ನಮ್ಮ ಕರ್ನಾಟಕ ಸೇನೆಯ ಜಿಲ್ಲಾಧ್ಯಕ್ಷ ಗಣೇಶ್ ಪಾಟೀಲ್ ಅವರ ನೇತೃತ್ವದಲ್ಲಿ ಮನವಿ ಭಾಲ್ಕಿ ತಹಶೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ ಹಾಗೂ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರವು ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಗೆ ಆದೇಶ ನೀಡಿದ್ದರೂ, ಅನೇಕ ಕಡೆಗಳಲ್ಲಿ ನಿಯಮ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ. ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದರು.

ಭಾಲ್ಕಿ ತಾಲೂಕು ಹಾಗೂ ಪಟ್ಟಣದ ವ್ಯಾಪ್ತಿಯಲ್ಲಿರುವ ಎಲ್ಲ ವ್ಯಾಪಾರ ಸಂಸ್ಥೆಗಳು, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು ಮತ್ತು ಇತರ ಕಚೇರಿಗಳ ನಾಮಫಲಕಗಳನ್ನು ಪರಿಶೀಲಿಸಬೇಕು. ಸರ್ಕಾರದ ಆದೇಶದಂತೆ ಕನ್ನಡ ನಾಮಫಲಕ ಅಳವಡಿಸದ ಸಂಸ್ಥೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಕನ್ನಡ ಭಾಷೆಯ ಗೌರವ ಮತ್ತು ಅಸ್ತಿತ್ವವನ್ನು ಕಾಪಾಡಲು ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಕನ್ನಡ ಭಾಷೆ, ನಾಡು-ನುಡಿ ಮತ್ತು ಸಂಸ್ಕೃತಿಯ ಉಳಿವಿಗಾಗಿ ನಮ್ಮ ಕರ್ನಾಟಕ ಸೇನೆ ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ನಾಮಫಲಕಗಳಲ್ಲಿ ಕನ್ನಡ ಭಾಷೆಯ ಬಳಕೆಯ ನಿಯಮವನ್ನು ಸಮರ್ಪಕವಾಗಿ ಜಾರಿಗೊಳಿಸುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.
ಇದನ್ನೂ ಓದಿ : ಬೀದರ್ | ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಬಸವರಾಜ ಬಲ್ಲೂರ ಆಯ್ಕೆ
ನಮ್ಮ ಕರ್ನಾಟಕ ಸೇನೆಯ ಜಿಲ್ಲಾಧ್ಯಕ್ಷ ಗಣೇಶ್ ಪಾಟೀಲ್, ಯುವ ಘಟಕದ ಅಧ್ಯಕ್ಷ ಸುದೀಪ ತೂಗಾವೆ, ಕಸಾಪ ತಾಲೂಕು ಅಧ್ಯಕ್ಷ ನಾಗಭೂಷಣ ಮಾಮಮಾಡಿ, ಜಗದೀಶ್ ಪಾಟೀಲ್, ಸಂತೋಷ್ ಪಾಟೀಲ, ಬಿ.ಜಿ. ರೇವಣ್ಣಯ್ಯ ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.





