ಭಾಲ್ಕಿ ತಾಲೂಕು ಸೇರಿ ಜಿಲ್ಲೆಯ ಕ್ಷೇತ್ರದಲ್ಲಿ ನಡೆಸಲಾಗುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಯಲ್ಲಿ ಅರ್ಹರ ಹೆಸರು ಕೈತಪ್ಪದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸಂಸದ ಸಾಗರ ಖಂಡ್ರೆ ಹೇಳಿದರು.
ನಗರದಲ್ಲಿ ಗುರುವಾರ ಚುನಾವಣೆ ಅಧಿಕಾರಿಗಳಿಂದ ಎನ್ಯುಮರೇಶನ್ ಫಾರ್ಮ್ ಸ್ವೀಕರಿಸಿ ಅವರು ಮಾತನಾಡಿದರು.
“ಚುನಾವಣಾ ಆಯೋಗವು ತಾಲೂಕು ಸೇರಿ ರಾಜ್ಯದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿದ್ದು, ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಚ್ಚರ ವಹಿಸಬೇಕು” ಎಂದರು.
ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಎಚ್ಚರವಹಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದು ತಿಳಿಸಿದರು.
“ಜು.29ರವರೆಗೆ ಚುನಾವಣಾ ಆಯೋಗದಿಂದ ನೇಮಕಗೊಂಡಿರುವ, ಬಿಎಲ್‌ಒಗಳು ನಿಮ್ಮ ಮನೆಗಳಿಗೆ ಬಂದು ಅರ್ಜಿ ನೀಡಲಿದ್ದಾರೆ. 30 ದಿನಗಳ ಅವಧಿಯಲ್ಲಿ ಕಡ್ಡಾಯವಾಗಿ ಎನ್ಯುಮರೇಷನ್ ಅರ್ಜಿ ತುಂಬಿ ಅಗತ್ಯ ದಾಖಲೆಗಳು ಹಾಗೂ ಹೊಸ ಫೋಟೋಗಳೊಂದಿಗೆ ಸಲ್ಲಿಕೆ ಮಾಡಬೇಕು. ಇದು ಮತದಾರರ ಕರ್ತವ್ಯವಾಗಿದೆ. ಈ ಅರ್ಜಿ ಸಲ್ಲಿಕೆ ಮಾಡದಿದ್ದರೆ, ಮತದಾನದ ಹಕ್ಕು ಕಳೆದುಕೊಳ್ಳುವ ಆತಂಕವಿದೆ” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ತಹಸೀಲ್ದಾರ ಮಲ್ಲಿಕಾರ್ಜುನ ವಡ್ಡನಕೇರಿ, ಮತಗಟ್ಟೆ ಅಧಿಕಾರಿ ಸೇರಿದಂತೆ ಹಲವರು ಹಾಜರಿದ್ದರು.




