ಕಾಂಗ್ರೆಸ್ ಸರ್ಕಾರದ ಜನವಿರೋಧಿ ಹಾಗೂ ರೈತ ವಿರೋಧಿ ನೀತಿಗಳಿಂದ ಬಡಜನರ ಬದುಕು ದುರ್ಬಲಗೊಂಡಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಆರೋಪಿಸಿದರು.
ನಗರದಲ್ಲಿ ಮಂಗಳವಾರ ತಾಲೂಕು ಬಿಜೆಪಿ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
“ಕಳೆದ ಮೂರುವರೆ ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಸುಳ್ಳು ಭರವಸೆಗಳನ್ನು ನೀಡುತ್ತಾ ಜನರನ್ನು ದಾರಿ ತಪ್ಪಿಸುತ್ತಿದೆ. ಐದು ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರಿಗೆ ಬೆಲೆ ಏರಿಕೆಯ ಬರೆ ಎಳೆಯಲಾಗಿದೆ. ಬಸ್ ಪ್ರಯಾಣ, ವಿದ್ಯುತ್, ಹಾಲು ಸೇರಿದಂತೆ ಜನಜೀವನಕ್ಕೆ ಅಗತ್ಯವಾದ ವಸ್ತುಗಳ ಬೆಲೆ ಹೆಚ್ಚಿಸುವ ಮೂಲಕ ಬಡವರ ಬದುಕನ್ನು ದುಬಾರಿಗೊಳಿಸಲಾಗಿದೆ” ಎಂದು ದೂರಿದರು.
ಜಿಲ್ಲೆಯಲ್ಲಿ ರೈತರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಳಿ, ಬಿಸಿಲು ಎನ್ನದೆ ಅಹೋರಾತ್ರಿ ಹೋರಾಟ ನಡೆಸುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರ ಸಮಸ್ಯೆ ಆಲಿಸುವ ಸೌಜನ್ಯ ತೋರಿಲ್ಲ. ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ಕೊಡಿಸಲು ಸಾಧ್ಯವಾಗದ ನಿಷ್ಕ್ರಿಯ ಸಚಿವರಿಂದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವಿಲ್ಲ. ಮುಂಬರುವ ಚುನಾವಣೆಯಲ್ಲಿ ಭಾಲ್ಕಿಯಿಂದಲೇ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಲು ಜನರು ಸಂಕಲ್ಪ ಮಾಡಿದ್ದಾರೆ ಎಂದು ಹೇಳಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಮಾಜಿ ಶಾಸಕ ಪ್ರಕಾಶ ಖಂಡ್ರೆ ಮಾತನಾಡಿ, “ತಾವು ಶಾಸಕರಾಗಿದ್ದ 7.4 ವರ್ಷಗಳ ಅವಧಿಯಲ್ಲಿ ಕ್ಷೇತ್ರದ ನೀರಾವರಿ ಪ್ರದೇಶ ಹೆಚ್ಚಿಸುವ ಉದ್ದೇಶದಿಂದ ಚಂದಾಪುರ, ಹಾಲಹಳ್ಳಿ, ಮಾಣಿಕೇಶ್ವರ ಸೇರಿದಂತೆ ನಾಲ್ಕು ಕಡೆಗಳಲ್ಲಿ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ಕಳೆದ 18 ವರ್ಷಗಳಿಂದ ಶಾಸಕ ಹಾಗೂ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಈಶ್ವರ ಖಂಡ್ರೆ ಅವರಿಂದ ಈ ಬ್ಯಾರೇಜ್‌ಗಳಲ್ಲಿ ನೀರು ಸಂಗ್ರಹಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಪ್ರಯತ್ನ ನಡೆದಿಲ್ಲ” ಎಂದು ಆರೋಪಿಸಿದರು.
“ಬಿಜೆಪಿಯ ಹೋರಾಟದ ಫಲವಾಗಿ ಭಾಲ್ಕಿಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. ಆದರೂ ರೈತರಿಗೆ ಇದುವರೆಗೆ ಬರ ಪರಿಹಾರ ದೊರೆತಿಲ್ಲ. ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಸಿಗುತ್ತಿಲ್ಲ. ರೈತರ ಬೆಳೆಗಳು ಒಣಗುತ್ತಿವೆ. ಕೂಡಲೇ ಕಾರಂಜಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಸಿದರು.
ರೈತರಿಗೆ ಬರ ಪರಿಹಾರ ವಿತರಣೆ, ಕಬ್ಬಿಗೆ ಸೂಕ್ತ ಬೆಲೆ ನಿಗದಿ, ರೈತರ ಸಾಲಮನ್ನಾ, ಬೆಳೆ ವಿಮೆ ಸೇರಿದಂತೆ ಒಟ್ಟು 11 ಬೇಡಿಕೆಗಳನ್ನು ಈಡೇರಿಸುವಂತೆ ಬಿಜೆಪಿ ಒತ್ತಾಯಿಸಿತು. ಈ ಬಗ್ಗೆ ರಾಜ್ಯಪಾಲರ ಹೆಸರಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ ಅವರಿಗೆ ಸಲ್ಲಿಸಿದರು.

ನಗರದ ಬಸವೇಶ್ವರ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಮಹಾತ್ಮ ಗಾಂಧಿ ವೃತ್ತ ಹಾಗೂ ಅಂಬೇಡ್ಕರ್ ವೃತ್ತದ ಮೂಲಕ ತಹಸೀಲ್ದಾರ್ ಕಚೇರಿಗೆ ತಲುಪಿತು. ಮೆರವಣಿಗೆಯುದ್ದಕ್ಕೂ ನೂರಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ : ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ
ತಾಲೂಕು ಬಿಜೆಪಿ ಅಧ್ಯಕ್ಷ ವೀರಣ್ಣ ಕಾರಬಾರಿ, ಶಿವರಾಜ ಗಂದಗೆ, ಚೆನ್ನಬಸವ ಬಳತೆ, ಪ್ರಸನ್ನ ಖಂಡ್ರೆ, ಶಿವು ಲೋಖಂಡೆ, ಸೂರಜ ಮಜಗೆ, ಕೆ.ಡಿ.ಗಣೇಶ, ತಾಲೂಕು ಬಿಜೆಪಿ ಒಬಿಸಿ ಅಧ್ಯಕ್ಷ ದೀಪಕ ಶಿಂಧೆ, ಲಕ್ಷ್ಮಣ ಮುದಾಳೆ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.




