ಬೇಸಿಗೆಯ ತೀವ್ರತೆ ಹಿನ್ನೆಲೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಹೇಳಿದರು.
ಭಾಲ್ಕಿ ತಾಪಂ ಸಭಾಂಗಣದಲ್ಲಿ ಶನಿವಾರ ಜರುಗಿದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ತಾಲ್ಲೂಕಿನ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
“ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯ ಪರಿಹಾರಕ್ಕೆ ಪ್ರಥಮ ಆದ್ಯತೆ ನೀಡಿ ತುರ್ತು ಪರಿಹಾರ ಕೈಗೊಳ್ಳಬೇಕು. ಸಮಸ್ಯೆ ಇರುವ ಗ್ರಾಮಗಳಲ್ಲಿ ಟ್ಯಾಂಕರ್, ಖಾಸಗಿ ಬಾವಿ ಹಾಗೂ ಬೋರ್‌ವೆಲ್‌ಗಳ ಮೂಲಕ ನೀರು ಪೂರೈಸಬೇಕು. ಜನರಿಗೆ ಸಮರ್ಪಕವಾಗಿ ನೀರು ಪೂರೈಕೆ ಆಗುವಂತೆ ಕಟ್ಟುನಿಟ್ಟಿನ ಕ್ರಮವಹಿಸಬೇಕು” ಎಂದರು.
ಉದ್ಯೋಗ ಖಾತ್ರಿ ಯೋಜನೆಯ ಅನುಮೋದಿತ ಕ್ರೀಯಾ ಯೋಜನೆಯಡಿ ನರೇಗಾ ಕೂಲಿ ಕಾರ್ಮಿಕರಿಗೆ ಹಳೆಯ ಆನ್ ಗೋಯಿಂಗ್ ಸಮುದಾಯ ಕಾಮಗಾರಿಗಳಲ್ಲಿ ಕೆಲಸ ಕೊಡಿ. ಕಾಮಗಾರಿ ಸ್ಥಳದಲ್ಲಿ ಅವರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿ. ಗ್ರಾಮ ಪಂಚಾಯಿತಿ ತೆರಿಗೆ ಸಂಗ್ರಹ ಕಾರ್ಯ ತೀವ್ರಗೊಳಿಸಿ ಎಂದರು.
ಇದನ್ನೂ ಓದಿ : ಬೀದರ್ | ರಾಷ್ಟ್ರೀಯ ಹೆದ್ದಾರಿಯಲ್ಲಿ ತಂಗುದಾಣ ಕೊರತೆ : ರಸ್ತೆ ಬದಿಯಲ್ಲೆ ಬಸ್‌ಗೆ ಕಾಯುವ ಸ್ಥಿತಿ
ಜಿಪಂ ಸಹಾಯಕ ಕಾರ್ಯದರ್ಶಿ (ಆಡಳಿತ) ಶಿವಲೀಲಾ, ತಾಲ್ಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಮಾಣಿಕರಾವ ಹಾಗೂ ನರೇಗಾ ಸಹಾಯಕ ನಿರ್ದೇಶಕ ಬಾಲಾಜಿ ಕೋಟೆ ವೇದಿಕೆ ಮೇಲಿದ್ದರು. ವಿವಿಧ ಗ್ರಾಪಂಗಳ ಪಿಡಿಒ, ಕಾರ್ಯದರ್ಶಿ ಹಾಗೂ ಕರವಸೂಲಿಗಾರರು ಸಭೆಯಲ್ಲಿ ಹಾಜರಿದ್ದರು.
ವಿವಿಧ ಗ್ರಾಮಗಳಿಗೆ ಭೇಟಿ :
ಸಭೆಯ ನಂತರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಬಿರಿ(ಕೆ) ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆರೂರ(ಹೆಚ್) ಹಾಗೂ ಡೋಣಗಾಪೂರ ಗ್ರಾಪಂ ವ್ಯಾಪ್ತಿಯ ಅಳಂದಿ ಗ್ರಾಮಕ್ಕೆ ಭೇಟಿ ನೀಡಿ ಟ್ಯಾಂಕರ್ ಮೂಲಕ ಸಾರ್ವಜನಿಕರಿಗೆ ನೀರು ಪೂರೈಕೆ ಆಗುತ್ತಿರುವ ಬಗ್ಗೆ ಪರಿಶೀಲಿಸಿದ ಅವರು ʼಯಾವ ಗ್ರಾಮಗಳಲ್ಲೂ ನೀರಿನ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕುʼ ಎಂದು ಸ್ಥಳದಲ್ಲಿದ್ದ ಪಿಡಿಒ ಅವರಿಗೆ ಸೂಚನೆ ನೀಡಿದರು.




