ಬೀದರ್ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭಾಗವಾಗಿ ಮೊದಲ ಹಂತದ ಕರಡು ಪಟ್ಟಿ ಪೂರ್ಣಗೊಂಡಿದ್ದು, ಆ.24ರಂದು ಪಟ್ಟಿ ಬಿಡುಗಡೆ ಮಾಡಲಾಗಿದೆ. ಬೀದರ್ ಜಿಲ್ಲೆಯಲ್ಲಿ ಸುಮಾರು 2.41 ಲಕ್ಷ ಮತದಾರರನ್ನು ಮೊದಲ ಕರಡು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ.
ಜಿಲ್ಲೆಯಲ್ಲಿ ಒಟ್ಟು ಆರು ವಿಧಾನಸಭಾ ಕ್ಷೇತ್ರಗಳಿದ್ದು, ಎಸ್‌ಐಆರ್ ಆರಂಭಕ್ಕೂ ಮುನ್ನ ಒಟ್ಟು 14,61,959 ಮತದಾರರಿದ್ದರು. ಎಎಸ್‌ಡಿಡಿಒ (ಗೈರು, ಶಾಶ್ವತ ಸ್ಥಳಾಂತರ, ಮೃತ, ಡುಪ್ಲಿಕೇಟ್ ಹಾಗೂ ಇತರೆ ಎಂದು ವರ್ಗೀಕರಣದಿಂದ ಒಟ್ಟು 2,41044 ಅಂದರೆ ಶೇ 16.49ರಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಹೊರಹಾಕಲಾಗಿದೆ. ಜಿಲ್ಲೆಯಲ್ಲಿ ಇದೀಗ ಒಟ್ಟು 12,20,916 ಮತದಾರರು ಇದ್ದಂತಾಗಿದೆ.
ಈ ಹಿಂದೆ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1,529 ಮತಗಟ್ಟೆಗಳಿದ್ದವು, ಇದೀಗ ಆ ಸಂಖ್ಯೆ 1,579ಕ್ಕೆ ಏರಿಕೆಯಾಗಿದೆ. ಒಟ್ಟು 12,20,916 ಮತದಾರರ ಪೈಕಿ ಪುರುಷರ ಸಂಖ್ಯೆ 6,32,572 ಹಾಗೂ ಮಹಿಳೆಯರ ಸಂಖ್ಯೆ 5,88,310, ಲೈಂಗಿಕ ಅಲ್ಪಸಂಖ್ಯಾತರ ಸಂಖ್ಯೆ 34 ಇರುವುದಾಗಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾಹಿತಿ ನೀಡಿದ್ದಾರೆ.
ಭಾರತ ಚುನಾವಣಾ ಆಯೋಗ ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಅವರ ನಿರ್ದೇಶನದಂತೆ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)-2026ರ ಅಂಗವಾಗಿ ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಆಕ್ಷೇಪಣೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

2026ರ ಆಗಸ್ಟ್ 24 ರಂದು ಕರಡು ಮತದಾರರ ಪಟ್ಟಿಯನ್ನು ತಯಾರಿಸಿ ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ, ತಹಸೀಲ್ದಾರ್ ಕಚೇರಿ, ಸಹಾಯಕ ಆಯುಕ್ತರ ಕಚೇರಿ, ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಹಾಗೂ ನಿಗದಿತ ಸ್ಥಳಗಳ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದೆ. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯ ಒಂದು ಪ್ರತಿಯನ್ನು ಅನುಮೋದಿತ ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಬೀದರ್ | ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ʼಶುದ್ಧೀಕರಣʼ ಮಾನವ ಸಮಾಜ ತಲೆತಗ್ಗಿಸುವ ಕೃತ್ಯ
ಈ ಕರಡು ಮತದಾರರ ಪಟ್ಟಿಯ ಕುರಿತು ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ, ಆಗಸ್ಟ್ 24 ರಿಂದ ಸೆಪ್ಟೆಂಬರ್ 23ರ ಒಳಗೆ ಸಂಬಂಧಪಟ್ಟ ತಹಸೀಲ್ದಾರ್ ಕಚೇರಿಯಲ್ಲಿ ಸಲ್ಲಿಸಲು ಕಾಲಾವಕಾಶ ಕಲ್ಪಿಸಲಾಗಿದೆ. ಆಯಾ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ ಅಥವಾ ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿ, ಹಾಗೂ ಆನ್‌ಲೈನ್‌ನಲ್ಲಿ ceo.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.




